
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 09 : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳು ಮತ್ತು ಸಂಯುಕ್ತ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬಧುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಯೂನಿಯನ್ ಪಾರ್ಕ್‍ನಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಕಾರ್ಮಿಕ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು ದಿನಕ್ಕೆ ಹನ್ನೆರಡು ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಶ್ರಮಕ್ಕೆ ತಕ್ಕಂತೆ ವೇತನವಿಲ್ಲ. ಆತ್ಮಗೌರವದಿಂದ ಬದುಕಲು ಕನಿಷ್ಟ ವೇತನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಕಾಯಂಗೊಳಿಸುವಂತೆ ಗುಜರಾತ್ ಹೈಕೋರ್ಟ್ ತೀರ್ಪು ನೀಡಿದೆ. ಅದರ ಪ್ರಕಾರ ಎಲ್ಲಾ ರಾಜ್ಯಗಳಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಖಾಯಂಗೊಳಿಸಿ ಜೀವನ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು.
ದೇವನಹಳ್ಳಿಯಲ್ಲಿ ರೈತರು ತಮ್ಮ ಜಮೀನುಗಳನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿರುವಾಗ ಎಂ.ಬಿ.ಪಾಟೀಲ್ ಅಪಸ್ವರವೆತ್ತುತ್ತಿರುವುದು ಸರಿಯಲ್ಲ. ಚನ್ನರಾಯಪಟ್ಟಣದ ಸುತ್ತಮುತ್ತ ಹದಿಮೂರು ಹಳ್ಳಿಗಳ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ತನ್ನ ಕ್ರಮದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆಂದು ಎಚ್ಚರಿಸಿದರು.
ಸಿ.ಪಿ.ಐ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡುತ್ತ ರೈತರು ಮತ್ತು ಕಾರ್ಮಿಕರ ಕಾಯಿದೆಗಳನ್ನು ತಿದ್ದುಪಡಿಗೊಳಿಸಿರುವ ಕೇಂದ್ರ ಸರ್ಕಾರ 28 ಕೋಟಿಯಲ್ಲಿ ಹತ್ತು ಕೋಟಿ ರೂ.ಗಳನ್ನು ಕಡಿತಗೊಳಿಸಿ ಅಂಗನವಾಡಿ ಕಾರ್ಯಕರ್ತೆಯರ ಹಕ್ಕನ್ನು ಕಸಿದುಕೊಂಡಿದೆ. ಮೂರನೆ ಅವಧಿಗೆ ಅಧಿಕಾರಕ್ಕೆ ಬಂದಿರುವ ದೇಶದ ಪ್ರಧಾನಿ ನರೇಂದ್ರಮೋದಿರವರು ಜನಸಾಮಾನ್ಯರ, ದುಡಿಯುವ ವರ್ಗ, ರೈತರು, ಕಾರ್ಮಿಕರ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರನ್ನು ತತ್ತರಿಸುವಂತೆ ಮಾಡಿದೆ. ಉದ್ಯಮಿಗಳು, ಕಾರ್ಪೊರೇಟ್ ಕಂಪನಿಗಳ ಪರವಾಗಿ ನಿಲ್ಲಬಾರದೆಂದರು.
ರೈತ ಮುಖಂಡ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ ನೆರೆಯ ಆಂಧ್ರದಲ್ಲಿ ಕೇವಲ 900 ರೂ.ಗಳಿಗೆ ಸ್ಮಾರ್ಟ್ ಮೀಟರ್ ಸಿಗುತ್ತದೆ. ಅದೆ ಕರ್ನಾಟಕದಲ್ಲಿ ಹತ್ತು ಸಾವಿರ ರೂ.ಗಳಿಗೆ ರೈತರಿಗೆ ಸ್ಮಾರ್ಟ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಹಾಕಲು ನಿಮ್ಮ ಮನೆ ಬಾಗಿಲಿಗೆ ಬಂದರೆ ತಕ್ಕ ಶಾಸ್ತಿ ಮಾಡಿ ಓಡಿಸಿ ಎಂದು ರೈತರಿಗೆ ಕರೆ ನೀಡಿದರು.
ಎ.ಪಿ.ಎಂ.ಸಿ.ಹಮಾಲರ ಸಂಘದ ಅಧ್ಯಕ್ಷ ಕಾಂ.ಬಿ.ಬಸವರಾಜ್, ಸಿ.ಪಿ.ಐ. ತಾಲ್ಲೂಕು ಕಾರ್ಯದರ್ಶಿ ಟಿ.ಆರ್.ಉಮಾಪತಿ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಭಾಗ್ಯಮ್ಮ, ಎಸ್.ಯು.ಸಿ.ಐ.ನ ರವಿಕುಮಾರ್, ಸಿ.ಐ.ಟಿ.ಯು. ಸಿ.ಕೆ.ಗೌಸ್‍ಪೀರ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಕಾಂ.ಕೆ.ಇ.ಸತ್ಯಕೀರ್ತಿ ಸೇರಿದಂತೆ ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


0 Comments
If u have any queries, Please let us know