
ಕಳೆದ ಆರು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿದ್ದ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.ಇದರ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಎಐಸಿಸಿ ಮೂಲಗಳ ಪ್ರಕಾರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಳಿ ಇರುವ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಮತ್ತೊಬ್ಬ ಹಿರಿಯ ನಾಯಕರಿಗೆ ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಎದ್ದಾಗಲೆಲ್ಲಾ “ಒಬ್ಬರಿಗೆ ಒಂದೇ ಹುದ್ದೆ” ಎಂಬ ಬೇಡಿಕೆ ಕಾಂಗ್ರೆಸ್ ಒಳಗೇ ಕೇಳಿಬರುತ್ತಿತ್ತು. ಡಿಕೆ ಶಿವಕುಮಾರ್ ಡಿಸಿಎಂ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿರುವುದಕ್ಕೆ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಒತ್ತಡ ಹೆಚ್ಚಾಗಿತ್ತು.ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರ ಹೆಸರುಗಳು ಅಧ್ಯಕ್ಷ ಹುದ್ದೆಗೆ ಕೇಳಿಬಂದಿದ್ದರೂ, ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೆಸರು ಹೆಚ್ಚು ಮುನ್ನಲೆಗೆ ಬಂದಿದೆ. ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕನಾಗಿರುವ ಜಾರಕಿಹೊಳಿ, ಸಿದ್ದರಾಮಯ್ಯ ಆಪ್ತ ವಲಯದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಅವರು ಭಾರೀ ಲಾಬಿ ನಡೆಸಿದ್ದು, ಅಗತ್ಯವಿದ್ದರೆ ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂಬ ಸಂದೇಶವನ್ನೂ ನೀಡಿದ್ದಾರೆ ಎನ್ನಲಾಗಿದೆ.
ಗ್ರೇಟರ್ ಬೆಂಗಳೂರು ಚುನಾವಣೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಜಾತಿ ಸಮೀಕರಣದ ಲೆಕ್ಕಾಚಾರದಲ್ಲಿ ತೊಡಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸತೀಶ್ ಜಾರಕಿಹೊಳಿಗೆ ನೀಡುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗಳವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿತ್ತು. ಆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ತಮ್ಮಲ್ಲೇ ಉಳಿಸಿಕೊಂಡಿದ್ದಕ್ಕೆ ಪಕ್ಷದೊಳಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮುಖ್ಯಮಂತ್ರಿ ಬದಲಾವಣೆಯ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯನ್ನೂ ಒಂದೇ ಹಂತದಲ್ಲಿ ಪೂರ್ಣಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ ಎನ್ನಲಾಗುತ್ತಿದೆ.












source https://suddione.com/along-with-the-cm-change-will-the-kpcc-president-also-be-removed-here-is-the-congress-high-commands-double-game/

0 Comments
If u have any queries, Please let us know