
ಕಾವೇರಿ ನೀರು ಹಂಚಿಕೆ ವಿವಾದ: ಆ.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ನವದೆಹಲಿ: ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ನೀರು ಬಿಡುಗಡೆಯ ದತ್ತಾಂಶದ ಸಹಿತ ವರದಿ ಸಲ್ಲಿಸುವಂತೆ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ಸೂಚಿಸಿರುವ ಸುಪ್ರೀಂ ಕೋರ್ಟ್, ಮುಂದಿನ ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಿದೆ. ಅದರೆ, ನ್ಯಾಯಮಂಡಳಿಯ ತೀರ್ಪಿಗೆ ಅನುಗುಣವಾಗಿ ನೀರು ಹರಿದಿಲ್ಲ ಎಂದು ತಮಿಳುನಾಡು ಸರ್ಕಾರ ಪರ ವಕೀಲರು ವಾದಿಸಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸಿರುವುದರಿಂದ ಸಮಸ್ಯೆ ಏನಿದೆ. ಉಳಿದ ವಿಷಯಕ್ಕೆ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಸಲಹೆ ನೀಡಿದೆ.
ಇಂದು ಹಾಗೂ ನಾಳೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ಸಭೆ ಇದೆ ಎಂದು ವಕೀಲರು ಗಮನ ಸೆಳೆದರು. ಬಳಿಕ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಅತ್ಯಂತ ಸಂಕಷ್ಟದ ಹೊರತಾಗಿಯೂ ತಮಿಳುನಾಡಿಗೆ ಪ್ರತಿದಿನ 12,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ ಎಂದುಆ.17ರಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ನೆರೆ ರಾಜ್ಯಕ್ಕೆ ಕಾವೇರಿ ನೀರು ಹರಿಸುವಿಕೆಗೆ ಸಂಬಂಧಿಸಿದಂತೆ ಪಾಲನಾ ವರದಿ ಸಲ್ಲಿಸುವಂತೆ ಕರ್ನಾಟಕಕ್ಕೆ ನ್ಯಾಯಾಲಯ ನಿರ್ದೇಶನ ನೀಡಿತ್ತು.