
ಉಡುಪಿ| ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು
ಉಡುಪಿ: ಕಾಪು ತಾಲ್ಲೂಕಿನ ಮುದರಂಗಡಿ ಪೇಟೆಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಎಂಬುವವರನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದ ಆರೋಪಿ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಅವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪದ ಒತ್ತಿನೆಣೆಯಲ್ಲಿ ಪೋಲಿಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.
ಈ ವೇಳೆ ಪಿಎಸ್ಐ ತೇಜಸ್ವಿ ಅವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ತೇಜಸ್ವಿ ಅವರಿಗೆ ಗಾಯವಾಗಿದ್ದು, ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಆರೋಪಿಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.