
ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ!
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆಯಾಗಿದೆ.
ಈ ಕುರಿತು ‘ಡೆಕ್ಕನ್ ಹೆರಾಲ್ಡ್’ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ, ಸಹಾಯಕ ಸೂಪರಿಂಟೆಂಡೆಂಟ್ ಅವರನ್ನು ಅಮಾನತುಗೊಳಿಸಲಾಗಿದ್ದು, ಜೈಲು ಸೂಪರಿಂಟೆಂಡೆಂಟ್ (ಎಸ್‌ಪಿ) ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಖಚಿತಪಡಿಸಿದ್ದಾರೆ.
‘ಸಿಸಿಬಿ ಅಧಿಕಾರಿಗಳು ಎಲ್ಲ ಪ್ರಭಾವಿ ಕೈದಿಗಳ ಬ್ಯಾರಕ್‌ಗಳ ಮೇಲೆ ಮಂಗಳವಾರ ದಾಳಿ ನಡೆಸಿದ್ದರು. ಈ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಒಂದು ಆಂಡ್ರಾಯ್ಡ್ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ’ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
‘ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಡಿಐಜಿ ಅವರ ವರದಿ ಆಧರಿಸಿ ಸಂಬಂಧಪಟ್ಟ ಸಹಾಯಕ ಸೂಪರಿಂಟೆಂಡೆಂಟ್ ಈರಣ್ಣ ರಂಗಾಪುರ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ, ಬೆಂಗಳೂರು ಕೇಂದ್ರ ಕಾರಾಗೃಹದ ಎಸ್‌ಪಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ’ ಎಂದು ಅವರು ಹೇಳಿದ್ದಾರೆ.
ಸಿಸಿಬಿ ಅಧಿಕಾರಿಗಳ ದೂರು ಆಧರಿಸಿ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕುಮಾರ್ ಹೇಳಿದ್ದಾರೆ.
ಈ ಘಟನೆಯಿಂದಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಗಳನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (36) ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ, 2025ರ ಆಗಸ್ಟ್‌ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್, ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೊಗಳು ಹರದಾಡಿದ್ದವು.