
ಬೈಂದೂರು: ಅಳಿವೆಕೋಡಿ, ತಾರಾಪತಿ ಮುಖ್ಯ ರಸ್ತೆಯಲ್ಲಿ ಸಂಚಾರ ದುಸ್ತರ
ಬೈಂದೂರು: ತಾಲ್ಲೂಕಿನ ಅಳಿವೆಕೋಡಿ, ತಾರಾಪತಿ ಮುಖ್ಯ ರಸ್ತೆಯು ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಜನರು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ.
25 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಈ ರಸ್ತೆಯಲ್ಲಿ ಹಲವೆಡೆ ದೊಡ್ಡ ಗುಂಡಿಗಳು ಉಂಟಾಗಿದ್ದು, ಕೆಲವೆಡೆ ಕೆರೆಯಂತಾಗಿ ನೀರು ತುಂಬಿದೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ಮಕ್ಕಳಿಗೆ ಪ್ರತಿದಿನ ತೀವ್ರ ತೊಂದರೆಯಾಗುತ್ತಿದೆ.
ಈ ರಸ್ತೆಯಲ್ಲಿ ಪ್ರತಿದಿನ ಹಲವು ಶಾಲಾ ವಾಹನಗಳು ಸಂಚರಿಸುತ್ತಿದ್ದವು. ರಸ್ತೆಯು ತೀವ್ರವಾಗಿ ಹದಗೆಟ್ಟಿರುವುದರಿಂದ ಶಾಲಾ ವಾಹನಗಳು ಈ ಭಾಗಕ್ಕೆ ಬರಲು ಒಪ್ಪುತ್ತಿಲ್ಲ. ಅದರಿಂದ ಸುಮಾರು 150 ಶಾಲಾ ಮಕ್ಕಳು ಇದೇ ರಸ್ತೆಯಲ್ಲಿ ನಡೆದುಕೊಂಡೇ ಶಾಲೆಗೆ ತೆರಳುತ್ತಿದ್ದಾರೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ರಸ್ತೆ ಹದಗೆಟ್ಟಿರುವುದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿದ್ದು, ನಡೆದುಕೊಂಡು ಹೋಗುವ ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ. ಸಾರ್ವಜನಿಕರು, ರೈತರು, ಮೀನುಗಾರರು, ಉದ್ಯೋಗಸ್ಥರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ತುರ್ತು ವೈದ್ಯಕೀಯ ಸೇವೆಯಾದ ಆಂಬುಲೆನ್ಸ್‌ಗಳ ಸಂಚಾರ ಕೂಡ ಈ ರಸ್ತೆಯಲ್ಲಿ ಪ್ರಯಾಸದಾಯಕವಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತಷ್ಟು ಹಾಳಾಗಿದ್ದು, ವಾಹನ ಸಂಚಾರ ಅಪಾಯಕಾರಿಯಾಗಿದೆ. ಈ ಕುರಿತು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೆ ಯಾವುದೇ ಶಾಶ್ವತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಜುಲೈ ತಿಂಗಳಿನಲ್ಲಿ ರಸ್ತೆಯನ್ನು ತುರ್ತು ದುರಸ್ತಿ ಮಾಡುವಂತೆ ಈ ಭಾಗದ ನೂರಾರು ಜನರು ಬೈಂದೂರು ತಾಲ್ಲೂಕು ಆಡಳಿತದ ಸೌಧದ ಎದುರು ಪ್ರತಿಭಟನೆ ನಡೆಸಿದ್ದರು. ಪರಿಣಾಮವಾಗಿ ಪಟ್ಟಣ ಪಂಚಾಯಿತಿ ವತಿಯಿಂದ ತಾತ್ಕಾಲಿಕವಾಗಿ ರಸ್ತೆಗುಂಡಿಗಳನ್ನು ಮುಚ್ಚಲಾಗಿತ್ತು. ಆದರೆ ಮಳೆಯಿಂದಾಗಿ ರಸ್ತೆ ಗುಂಡಿಗೆ ಹಾಕಿದ್ದ ಜಲ್ಲಿಕಲ್ಲು ಕೊಚ್ಚಿ ಹೋಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260818-28-2074422212