
ಪೀಣ್ಯ ದಾಸರಹಳ್ಳಿ: ಮಹಿಳೆಯ ಅಸ್ಥಿಪಂಜರ ಪತ್ತೆ
ಪೀಣ್ಯ ದಾಸರಹಳ್ಳಿ: ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ಅದರ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.
ಮಹಿಳೆ ದಾಕ್ಷಾಯಣಿ ಅವರ ಅಸ್ಥಿಪಂಜರ ಎಂಬುದು ಕಂಡುಬಂದಿದೆ ಎಂದು ಮೂಲಗಳು ಹೇಳಿವೆ.
‘ಮಹಿಳೆ ಮೃತಪಟ್ಟು ಒಂದೂವರೆ ವರ್ಷ ಕಳೆದಿದೆ. ಇದೀಗ ಅಸ್ಥಿಪಂಜರವು ದೊರೆತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ದಾಕ್ಷಾಯಣಿ ಅವರ ಪತಿ ಉಮೇಶ್ 10 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಅನಾರೋಗ್ಯದಿಂದ ಪುತ್ರ ಸಹ ಮೃತಪಟ್ಟಿದ್ದರು. ದಾಕ್ಷಾಯಣಿ ಅವರು ಒಬ್ಬರೇ ಮನೆಯಲ್ಲಿ ವಾಸವಿದ್ದರು. ಶೌಚಾಲಯಕ್ಕೆ ತೆರಳಿದ್ದ ವೇಳೆ ಅವರು ಮೃತಪಟ್ಟಿರುವ ಸಾಧ್ಯತೆಯಿದೆ’ ಎಂಬುದಾಗಿ ಪೊಲೀಸರು ಶಂಕಿಸಿದ್ದಾರೆ.
‘ಶುಕ್ರವಾರ ರಾತ್ರಿ 8ರ ಸುಮಾರಿಗೆ ದಾಕ್ಷಾಯಣಿ ಅವರ ವಾಸವಿದ್ದ ಮನೆಯ ಬಾಗಿಲು ಏಕಾಏಕಿ ತೆರೆದು ಕೊಂಡಿತ್ತು. ಯಾರೋ ಕಳ್ಳರು ಮನೆಗೆ ನುಗ್ಗಿರಬಹುದು ಎಂದು ಶಂಕಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮನೆಯ ಶೌಚಾಲಯದಲ್ಲಿ ಅಸ್ಥಿಪಂಜರ ಪತ್ತೆ ಆಗಿದೆ ಎಂದು ಮೂಲಗಳು ಹೇಳಿವೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260809-4-514434487