
ರಾಯಚೂರು: ಹತ್ಯೆಯಾದ ಅಶ್ವಿನಿ ತಿಮ್ಮಾರೆಡ್ಡಿ ನಿವಾಸಕ್ಕೆ ಅಜಯ್ ಸಿಂಗ್ ಭೇಟಿ
ರಾಯಚೂರು: ‘ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಪರಿಶಿಷ್ಟ ಮೇಲೆ ನಡೆದ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಹೇಳಿದರು.
‘ಪ್ರಕರಣಗಳನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಗಮನಕ್ಕೆ ತರಲಾಗಿದೆ. ಅವರೂ ಸಹ ಕ್ರಮಕ್ಕೆ ಸೂಚನೆ ನೀಡಿದ್ದಾರೆ‘ ಎಂದು ಸಿರವಾರ ತಾಲ್ಲೂಕಿನ ಹೊಕ್ರಾಣಿಯಲ್ಲಿ ಅಶ್ವಿನಿ ಅವರ ಮನೆಗೆ ಭೇಟಿ ನೀಡಿ ಅಶ್ವಿನಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.
‘ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
'ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯವಿರುವ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವಂತೆ ಗೃಹ ಸಚಿವರಿಗೆ ತಿಳಿಸಲಾಗಿದೆ, ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಂದು ಜಿಲ್ಲೆಯಲ್ಲೂ ಹಾಗೂ ವಿಶೇಷವಾಗಿ ರಾಯಚೂರು ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿ, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಲು ಸರ್ಕಾರ ಬದ್ಧವಾಗಿದೆ" ಎಂದರು.
ಸಂಸದರಾದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು, ಮಾನ್ವಿ ಶಾಸಕ ಹಂಪಯ್ಯ ನಾಯಕ, ರಾಯಚೂರು ಉಪ ವಿಭಾಗಾಧಿಕಾರಿ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಸಿರವಾರ ತಹಶೀಲ್ದಾರ್ ಚಂದ್ರಶೇಖರ ಪವಾರ ಉಪಸ್ಥಿತರಿದ್ದರು.