
ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ಕನ್ನಡ ಸಂಘಟನೆಗಳ ಮುಖಂಡರಿಂದ ಸಿಎಂಗೆ ಮನವಿ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಕನ್ನಡ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
'ಕಾವೇರಿ ನದಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ಸ್ಪಷ್ಟವಾಗಿ ನಿರ್ಧಾರ ಕೈಗೊಳ್ಳಬೇಕು. ರಾಜ್ಯದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು' ಎಂದು ಒತ್ತಾಯಿಸಿದರು.
ಅಖಿಲ ಕರ್ನಾಟಕ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ ಗೋವಿಂದು ಮಾತನಾಡಿ, 'ಸರ್ಕಾರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದೆ. ಮಾತಿಗೆ ತಪ್ಪಿದರೆ ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ' ಎಂದು ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಎಚ್. ಶಿವರಾಮೇಗೌಡ, ಕನ್ನಡ ಪರ ಹೋರಾಟಗಾರ ಫಾಲನೇತ್ರ ಸಿ ಕೆ ರಾಮೇಗೌಡ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ , ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ಅಧ್ಯಕ್ಷ ಕನ್ನಡ ಕುಮಾರ್, ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಶಂಕರ್ ಮತ್ತು ಸಮರಸೇನೆಯ ಅಧ್ಯಕ್ಷ ಜಗದೀಶ್ ಗೌಡ ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.