
ಹಾಸನದಲ್ಲಿ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭ
ಹಾಸನ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹಾಸನ ಜಿಲ್ಲಾ ಘಟಕದ ವತಿಯಿಂದ ಆ.16ರಂದು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಅಭಿನಂದನೆ ಹಾಗೂ ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಕೃಷ್ಣಮೂರ್ತಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ಮತ್ತು ಜುಲೈ ತಿಂಗಳಲ್ಲಿ ನಿವೃತ್ತರಾದ ಶಿಕ್ಷಕರಿಗೆ ಬೀಳ್ಕೊಡುಗೆ ನೀಡಲಾಗುವುದು. ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಶಿಕ್ಷಕರನ್ನು ಸನ್ಮಾನಿಸಲಾಗುವುದು. ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಗುರುತಿಸಿ ‘ಶಿಕ್ಷಕರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಅಬಕಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಉದ್ಘಾಟಿಸಲಿದ್ದು, ಶಾಸಕ ಸ್ವರೂಪ್ ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಸಂಸದ ಶ್ರೇಯಸ್ ಪಟೇಲ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಚೇತನ್ ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ, ಪದವೀಧರ ಶಿಕ್ಷಕರನ್ನು ಜಿಪಿಟಿಗೆ ವಿಲೀನಗೊಳಿಸುವುದು, ಪದವೀಧರ ಶಿಕ್ಷಕರಿಗೆ ವೇತನ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಕುರಿತು ಚರ್ಚಿಸಲಾಗುವುದು. ರಾಜ್ಯ ಸಂಘದ ಪದಾಧಿಕಾರಿಗಳು ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಡ ಹೇರಲಿದ್ದಾರೆ ಎಂದು ತಿಳಿಸಿದರು.
ಶಾಲೆಗಳಲ್ಲಿ ಪೌಷ್ಟಿಕ ಆಹಾರದ ಭಾಗವಾಗಿ ನೀಡುತ್ತಿರುವ ಮೊಟ್ಟೆಯ ದರ ಹೆಚ್ಚಳವಾಗಿದ್ದು, ಅದರ ವೆಚ್ಚವನ್ನು ಶಿಕ್ಷಕರು ಭರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರವೇ ಹೆಚ್ಚುವರಿ ವೆಚ್ಚವನ್ನು ಭರಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗುವುದು ಎಂದರು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಜಿ.ದ್ಯಾವೇಗೌಡ ಮಾತನಾಡಿ, ಕಾರ್ಯಕ್ರಮವು ಶಿಕ್ಷಕರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸಂಘಟನಾತ್ಮಕ ವೇದಿಕೆಯಾಗಲಿದೆ. ಸರ್ಕಾರದ ಹಂತದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಡ ಹೇರಲಿದ್ದಾರೆ. ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಗೌರವಾಧ್ಯಕ್ಷ ಅಣ್ಣಪ್ಪ, ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಎ.ಜೆ., ಉಪಾಧ್ಯಕ್ಷ ಕುಮಾರ್ ಡಿ.ಕೆ., ಜಿಲ್ಲಾ ಸಹಕಾರ್ಯದರ್ಶಿ ಪ್ರಭು ಕೆ., ತಾಲ್ಲೂಕು ಘಟಕದ ಅಧ್ಯಕ್ಷ ರೋಡಾಲ್ ಲೋಬೋ, ಗೌರವಾಧ್ಯಕ್ಷ ರವೀಂದ್ರ ಬಿ.ಕೆ ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260815-36-1907944045