
ತೋರ್ಪಡಿಕೆಗೆ ಖಾಸಗಿ ಶಾಲೆಗೆ ಸೇರಿಸದಿರಿ: ರೋಟರಿ ಕ್ಲಬ್ ಅಧ್ಯಕ್ಷ ಚನ್ನಪ್ಪ
ನಾಗಮಂಗಲ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ಎಲ್ಲಾ ಸೌಲಭ್ಯ ಸಿಗುತ್ತಿದ್ದರು, ಕೆಲ ಪೋಷಕರು ತೋರ್ಪಡಿಕೆಗಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ ಎಂದು ಪಟ್ಟಣದ ರೋಟರಿ ಕ್ಲಬ್ ಅಧ್ಯಕ್ಷ ಎಂ.ಸಿ.ಚನ್ನಪ್ಪ ಹೇಳಿದರು.
ತಾಲ್ಲೂಕಿನ ಕರಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಾಗಮಂಗಲ ರೋಟರಿ ಕ್ಲಬ್ ವತಿಯಿಂದ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಉಚಿತ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳು ಮಾನಸಿಕವಾಗಿ ಹೆಚ್ಚು ದೃಢರಾಗಿರುತ್ತಾರೆ. ವಿದ್ಯಾರ್ಥಿ ದಿಸೆಯಲ್ಲಿ ಎದುರಾಗುವ ಸಮಸ್ಯೆ ಎದುರಿಸುವ ಶಕ್ತಿ ಮತ್ತು ಮನಸ್ಥಿತಿ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗಿಂತ ಸರ್ಕಾರಿ ಶಾಲೆ ಮಕ್ಕಳಲ್ಲಿಯೇ ಹೆಚ್ಚು ಎಂದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮಧ್ಯಾಹ್ನದ ಬಿಸಿಯೂಟ, ಉಚಿತ ಪಠ್ಯಪುಸ್ತಕ ಸೇರಿದಂತೆ ಎಲ್ಲಾ ಸವಲತ್ತುಗಳು ಸಿಗುತ್ತವೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ತಿಳಿಸಿದರು.
ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಲ್ಲಿ ಉನ್ನತ ಹುದ್ದೆ ಅಲಂಕರಿಸಬೇಕೆಂಬ ಕನಸಿರುತ್ತದೆ. ಆ ಕನಸಿನ ಸಾಕಾರಕ್ಕೆ ಪೋಷಕರು, ಶಿಕ್ಷಕರು ಶ್ರಮಿಸಬೇಕು ಎಂದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ರೋಟರಿ ಕ್ಲಬ್ ವತಿಯಿಂದ ಅನೇಕ ಬಗೆಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪರಿಸರಕ್ಕೆ ಆದ್ಯತೆ ನೀಡುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಅರಳಿಕಟ್ಟೆಗಳನ್ನು ಅಭಿವೃದ್ಧಿಪಡಿಸಲು ಕೆಲ ಗ್ರಾಮ ಆಯ್ಕೆ ಮಾಡಿಕೊಳ್ಳಲಾಗಿದೆ. ಅಗತ್ಯವಿರುವ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆಯ ಖಜಾಂಚಿ ಬಿ.ಸಿ.ವಿಜಯಕುಮಾರ್ ಮಾತನಾಡಿ, ಅಂತರರಾಷ್ಟ್ರೀಯ ಸಂಸ್ಥೆಯಾಗಿರುವ ರೋಟರಿ ಕ್ಲಬ್ ವತಿಯಿಂದ ಶಾಲಾ, ಕಾಲೇಜು ಮಕ್ಕಳು ಮತ್ತು ಸಾರ್ವಜನಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲಾಗಿದೆ. ಎಂದರು.
ಮುಖ್ಯಶಿಕ್ಷಕ ಎನ್.ಸಿ.ಶಿವಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ್, ಕರಡಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಕೆ.ಎಸ್.ರವೀಂದ್ರ, ಎಸ್.ಗೋವಿಂದಯ್ಯ, ಜಯಬೋರೇಗೌಡ, ರಾಮಣ್ಣ, ಎಸ್‌ಡಿಎಂಸಿ ಸದಸ್ಯರಾದ ಮಹೇಶ್, ಶಿವಕುಮಾರ, ಕೃಷ್ಣ, ಅಶ್ವಿನಿ, ಸರಿತಾ, ನಾಗರಾಜು, ಶಿಕ್ಷಕರಾದ ದೇವಿಕಾ, ಪುಷ್ಪ, ಸಂಗೀತ, ಹರೀಶ್ ಹಾಜರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260809-40-1585235550