ಮಲೆ ಮಹದೇಶ್ವರ ವನ್ಯಧಾಮದಲ್ಲಿ ಕಾಡಾನೆ ದಾಳಿ; ವಾಚರ್ ಸಾವು
ಹನೂರು (ಚಾಮರಾಜನಗರ ಜಿಲ್ಲೆ); ಮಲೆ ಮಹದೇಶ್ವರ ವನ್ಯಧಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಗೆ ಇಲಾಖೆಯ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಮಹದೇವಸ್ವಾಮಿ(45) ಮೃತರು.
ಮಹದೇಶ್ವರ ಬೆಟ್ಟ ಉಪ ವಿಭಾಗದ ಮಹದೇಶ್ವರ ಬೆಟ್ಟ ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಶ್ರೀಗಂಧದ ಮರಗಳ ಕಡಿತಲೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಶನಿವಾರ ರಾತ್ರಿ ಆರೋಪಿಗಳ ಪತ್ತೆಗೆ ಸಿಬ್ಬಂದಿ ಗಸ್ತು ನಡೆಸುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು ಮಹದೇವಸ್ವಾಮಿ ಮೃತಪಟ್ಟಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಸಾಗಿಸಲಾಗಿದೆ.