
ಸಂಪುಟದಿಂದ ನಾಗೇಂದ್ರ ಬಿ.ಕೈಬಿಡಲು ಒತ್ತಾಯ: ಸ್ವಾತಂತ್ರ್ಯಉದ್ಯಾನದಲ್ಲಿ ಪ್ರತಿಭಟನೆ
ಬೆಂಗಳೂರು: ‘ಸಚಿವ ಬಿ.ನಾಗೇಂದ್ರ ಅವರ ಮೇಲೆ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪವಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಕೆಆರ್‌ಎಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರಘು ಜಾಣಗೆರೆ ಮಾತನಾಡಿ, ‘ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಮೀಸಲಾಗಿದ್ದ ಹಣದ ದುರುಪಯೋಗದ ಆರೋಪ ಇರುವ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಪರ ಧೋರಣೆಗೆ ಸ್ಪಷ್ಟ ಉದಾಹರಣೆ ಆಗಿದೆ. ಇ.ಡಿ, ಸಿಬಿಐ ಹಾಗೂ ಎಸ್‌ಐಟಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಇಂತಹ ಗಂಭೀರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ನೈತಿಕವಾಗಿ ಖಂಡನೀಯ’ ಎಂದು ಹೇಳಿದರು.
ರಾಜ್ಯ ಜಂಟಿ ಕಾರ್ಯದರ್ಶಿ ಎಲ್.ಜೀವನ್ ಮಾತನಾಡಿ, ‘ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಸರ್ಕಾರವೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಅಧಿಕಾರ ನೀಡಿರುವುದು ಸರ್ಕಾರದ ನೈತಿಕತೆಯನ್ನು ಪ್ರಶ್ನಿಸುವಂತಾಗಿದೆ’ ಎಂದು ಹೇಳಿದರು.
‘ಬಿ.ನಾಗೇಂದ್ರ ಅವರ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 2024ರಲ್ಲೇ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿ, ಈ ಪ್ರಕರಣದ ತನಿಖೆಗೆ ಒತ್ತಾಯಿಸಿತ್ತು. ಕೆಆರ್‌ಎಸ್ ಪಕ್ಷದ ಹೋರಾಟದ ಪರಿಣಾಮವಾಗಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಇಂದು ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿರುವುದು ಖಂಡನೀಯ’ ಎಂದು ದೂರಿದರು.
ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯ ಸ್ವಾಮಿ, ಆನಂದ ಹಾಗೂ ಅಕ್ಷಯ್, ಬೆಂಗಳೂರು ಪಶ್ಚಿಮ ಜಿಲ್ಲಾ ಅಧ್ಯಕ್ಷ ಆರ್.ದೇವರಾಜ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಧನಂಜಯ್, ಕಾರ್ಯ ನಿರ್ವಾಹಕ ಸಮಿತಿ ಸದಸ್ಯರಾದ ರಾಮರೆಡ್ಡಿ, ನಾಗರಾಜ್, ಶ್ರೀನಿವಾಸ್, ಪದಾಧಿಕಾರಿ ಗಳಾದ ವಾಸುದೇವನ್, ಸಂದೀಪ್, ಅನುಸ್ವಾಮಿ ಉಪಸ್ಥಿತರಿದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260809-4-127598923