
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮವಲಯಕ್ಕೆ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಕೆ
ಹಳಿಯಾಳ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮವಲಯ ಪ್ರದೇಶವೆಂದು ಜೋಯಿಡಾ ಮತ್ತಿತರ ಭಾಗವನ್ನು ಗುರುತಿಸಿ ಕೇಂದ್ರ ಕರಡು ಅಧಿಸೂಚನೆ ಹೊರಡಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕೇಂದ್ರ ಸಚಿವಾಲಯಕ್ಕೆ ಆಕ್ಷೇಪಣೆ ಸಲ್ಲಿಸಿರುವುದಾಗಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ ರವಾನಿಸಿದ್ದು, 7ನೇ ಬಾರಿ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಮತ್ತು ಸಲಹೆಗಾಗಿ ಆಹ್ವಾನಿಸಲಾಗಿದೆ. ಈಶ್ವರ ಖಂಡ್ರೆ ಅರಣ್ಯ ಸಚಿವರಿದ್ದಾಗ ಕಸ್ತೂರಿ ರಂಗನ್ ಅವರು ಅನುಷ್ಠಾನ ಕುರಿತು ಚರ್ಚೆ ನಡೆಸಿ ವರದಿ ತಿರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದರು’ ಎಂದರು.
ಈ ಕುರಿತು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಹಾಗೂ ಸಚಿವಾಲಯಕ್ಕೆ ಆಕ್ಷೇಪಣೆಯನ್ನು ಇ–ಮೇಲ್ ಮುಖಾಂತರ ಸಲ್ಲಿಸಲಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯನ್ನು ಮಂಗಳೂರು ಹೈಕೋರ್ಟ್ ಪೀಠಕ್ಕೆ ಸೇರಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
‘ರೈತರ ಬೆಳೆ ಹಾನಿ ಪರಿಹಾರಕ್ಕಾಗಿ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲು ಸಂಬಂಧಿಸಿದ ಕೃಷಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260817-20-1661210592