
Karnataka Rain: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮುಂದುವರಿದ ವರುಣನ ಆರ್ಭಟ: ಎಲ್ಲೆಲ್ಲಿ ಮಳೆ?
ಬೆಂಗಳೂರು : ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ದೇಶದ ವಿವಿಧ ಭಾಗಗಳಲ್ಲಿ ಆಗಸ್ಟ್ 26ರಿಂದ ಸೆಪ್ಟೆಂಬರ್ 1ರವರೆಗೆ ಮುಂಗಾರು ಚಟುವಟಿಕೆ ಮತ್ತೆ ಚುರುಕುಗೊಳ್ಳುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲೂ ಮಳೆ, ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ.
ಕರ್ನಾಟಕದಾದ್ಯಂತ ಇಂದು ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಜೋರಾಗಿದ್ದು, ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ. ಹಗಲಿನ ವೇಳೆಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಶೇ. 35ರಷ್ಟು ಮಳೆಯಾಗುವ ಸಾಧ್ಯತೆ ಇದ್ದರೆ, ರಾತ್ರಿ ವೇಳೆಯಲ್ಲಿ ಶೇ. 20ರಷ್ಟು ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಬಹುದು. ಹಗಲಿನ ವೇಳೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಮಳೆಯ ಸಾಧ್ಯತೆ ಶೇ. 55ರಷ್ಟು ಇರಲಿದೆ. ರಾತ್ರಿ ವೇಳೆಗೆ ಮಳೆಯ ಸಾಧ್ಯತೆ ಶೇ. 20ಕ್ಕೆ ಇಳಿಯುವ ನಿರೀಕ್ಷೆಯಿದೆ. ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ರಭಸ ಹೆಚ್ಚಿರಲಿದೆ. ಈ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 28ರಿಂದ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಮುದ್ರ ಭಾಗದಲ್ಲಿ ಗಾಳಿಯ ವೇಗ ಹೆಚ್ಚುವ ಸಾಧ್ಯತೆ ಇರುವುದರಿಂದ ಮೀನುಗಾರರು ಮತ್ತು ಕರಾವಳಿ ಭಾಗದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ 24ರಿಂದ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ ಸುಮಾರು 19 ಡಿಗ್ರಿ ಸೆಲ್ಸಿಯಸ್ ಇರಬಹುದು. ತಂಪಾದ ಗಾಳಿ, ಮಂಜು ಮುಸುಕಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಗಲಿನ ವೇಳೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಉಳಿದ ಕೆಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಿಸಿಲಿನ ವಾತಾವರಣವೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಪಶ್ಚಿಮ ದಿಕ್ಕಿನಿಂದ ಗಂಟೆಗೆ ಸುಮಾರು 10ರಿಂದ 14 ಮೈಲಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ಸಾರ್ವಜನಿಕರು ಗುಡುಗು-ಮಿಂಚಿನ ಸಮಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.