ಕೊಡಗಿನಲ್ಲಿ ಬರ: 2,279 ಹೆಕ್ಟೇರ್ ಬೆಳೆ ಹಾನಿ, ₹1.93 ಕೋಟಿ ಸಬ್ಸಿಡಿ ವರದಿ

ಕೊಡಗಿನಲ್ಲಿ ಬರ: 2,279 ಹೆಕ್ಟೇರ್ ಬೆಳೆ ಹಾನಿ, ₹1.93 ಕೋಟಿ ಸಬ್ಸಿಡಿ ವರದಿ

ಕೊಡಗಿನಲ್ಲಿ ಬರ: 2,279 ಹೆಕ್ಟೇರ್ ಬೆಳೆ ಹಾನಿ, ₹1.93 ಕೋಟಿ ಸಬ್ಸಿಡಿ ವರದಿ

ಮಡಿಕೇರಿ: ಮುಂಗಾರಿನ ವೇಳೆ ಸರಿಯಾದ ಸಮಯದಲ್ಲಿ ಮಳೆಯಾಗದೆ ಇರುವುದರಿಂದ ಕೊಡಗು ಜಿಲ್ಲೆಯಲ್ಲಿ ಒಟ್ಟು 2,279 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಲ್ಲಿ ಭತ್ತ ಮತ್ತು ಮುಸುಕಿನ ಜೋಳ ಸೇರಿವೆ.

ಸೋಮವಾರಪೇಟೆ ತಾಲ್ಲೂಕಿನಲ್ಲಿ 159 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ, ವಿರಾಜಪೇಟೆ ತಾಲ್ಲೂಕಿನಲ್ಲಿ 650 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ ಪೊನ್ನಂಪೇಟೆ ತಾಲ್ಲೂಕಿನಲ್ಲಿ 1,470 ಹೆಕ್ಟೇರ್ ಪ್ರದೇಶದಲ್ಲಿ ಒಟ್ಟು 2,279 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ವಿಷಯ ಶನಿವಾರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ನಡೆಸಿದ ಸಭೆಯಲ್ಲಿ ಗೊತ್ತಾಯಿತು.

ಈ ಮಾಹಿತಿ ನೀಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ₹1.93 ಕೋಟಿ ಇನ್‍ಪುಟ್ ಸಬ್ಸಿಡಿ ಬಿಡುಗಡೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಸತತ 3-4 ವಾರ ಮಳೆ ಆಗದಿದ್ದಲ್ಲಿ, ಹಾಗೆಯೇ ಮಣ್ಣಿನ ತೇವಾಂಶದ ಆಧಾರದ ಮೇಲೆ ಅಂತರ್ಜಲ ಮಟ್ಟವನ್ನು ಗಮನಿಸಿ ಬೆಳೆ ಹಾನಿ ಬಗ್ಗೆ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ ಮಾತನಾಡಿ, ಸದ್ಯಕ್ಕೆ ಕೊಡಗು ಜಿಲ್ಲೆಯಲ್ಲಿ ಮೇವಿನ ಕೊರತೆ ಉಂಟಾಗಿಲ್ಲ. ಜಾನುವಾರುಗಳಿಗೆ 46 ವಾರ ಬರುವಷ್ಟು ಮೇವು ದಾಸ್ತಾನು ಇದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಗೆ 2,340 ಮೇವಿನ ಬೀಜದ ಕಿಟ್‌ ವಿತರಿಸಲು ಹಂಚಿಕೆ ಆಗಿದ್ದು, ಶೀಘ್ರದಲ್ಲಿ ಮೇವಿನ ಬೀಜದ ಕಿಟ್‌ ವಿತರಿಸಲಾಗುತ್ತದೆ ಎಂದು ಹೇಳಿದರು.

ಹಾಲು ಕರೆಯುವ ಹಸುಗಳಿಗೆ ಹೆಚ್ಚು ಪ್ರೋಟೀನ್ ಯುಕ್ತ ಮೇವು ನೀಡುವಲ್ಲಿ ಅಜೋಲ ಬೆಳೆಸಲು 250 ರೈತರಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಜತೆಗೆ, ಹಾಲು ಒಕ್ಕೂಟದಿಂದ ಸಹ ಮೇವಿನ ಬೀಜದ ಕಿಟ್‌ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಲಜೀವನ್ ಮಿಷನ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್, ಜಿಲ್ಲೆಯಲ್ಲಿ ಡಿಸೆಂಬರ್‌ವರೆಗೆ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆ ಇಲ್ಲ ಎಂದು ತಿಳಿಸಿದರು.

ಸರ್ಕಾರದಿಂದ ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹ 1 ಕೋಟಿ ಬಿಡುಗಡೆಯಾಗಿದ್ದು, ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಗಮನಹರಿಸಲಾಗುವುದು ಎಂದು ಹೇಳಿದರು.

ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ಮಾತನಾಡಿ, ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಕುಡಿಯುವ ನೀರು, ಮೇವಿಗೆ ಕೊರತೆಯಾಗದಂತೆ ನಿಗಾ ವಹಿಸಿ

ಕೊಡಗು ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಮಳೆ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಹಾಗೂ ಮೇವಿಗೆ ವ್ಯತ್ಯಯ ಆಗದಂತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.

ಸರ್ಕಾರ ಈಗಾಗಲೇ ವಿರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದೆ. ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸಿ, ಜನರಿಗೆ ತೊಂದರೆಯಾಗದಂತೆ ಪರಿಸ್ಥಿತಿ ನಿಭಾಯಿಸಬೇಕು ಎಂದು ನಿರ್ದೇಶನ ನೀಡಿದರು.

ಎಲ್-ನಿನೊ ಪರಿಣಾಮದಿಂದ ಈ ಬಾರಿ ಮುಂಗಾರು ವಿಫಲವಾಗಿರುವುದರಿಂದ ಶೇ 33 ರಿಂದ 50ರಷ್ಟು ಕಡಿಮೆ ಮಳೆಯಾಗಿರುವ ತಾಲ್ಲೂಕನ್ನು ಬರ ಪೀಡಿತವೆಂದು ಸರ್ಕಾರ ಪ್ರಕಟಿಸಿದೆ. ಈ ಹಿನ್ನೆಲೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಕುಡಿಯುವ ನೀರಿನ ಅಭಾವ ಕಂಡು ಬಂದಿರುವ ಹಾಗೂ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯವಾಗಿ ಹತ್ತಿರದಲ್ಲಿರುವ ಹೆಚ್ಚು ನೀರು ಇಳುವರಿ ಹಾಗೂ ಗುಣಮಟ್ಟದ ಕೊಳವೆ ಬಾವಿಗಳನ್ನು ಗುರುತಿಸಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸುವಂತೆಯೂ ಸೂಚಿಸಿದರು.

ಗ್ರಾಮೀಣ ಪ್ರದೇಶದ ಜೊತೆಗೆ ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಸಹ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದರು.

ಪಶುಪಾಲನೆ, ಕೃಷಿ, ಕುಡಿಯುವ ನೀರು ಎಂಜಿನಿಯರ್ ವಿಭಾಗ, ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಗಳು ತಮ್ಮ ಹಂತದಲ್ಲಿ ಬರ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಎದುರಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ