
ಚಿತ್ರದುರ್ಗದಲ್ಲಿ 3ನೇ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಇಂದು
ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸೆ.19ರಂದು ಮಧ್ಯಾಹ್ನ 2 ರಿಂದ ಸಂಜೆ 5.30ರವರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ 3ನೇ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ತಕ್ಷಣವೇ ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಈ ಮೂಲಕ ಅವಕಾಶ ಕಲ್ಪಿಸಲಾಗಿದೆ.
ಸಿವಿಲ್ ವ್ಯಾಜ್ಯಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಬ್ಯಾಂಕ್ ವಸೂಲಾತಿ, ಕಂದಾಯ, ಮೋಟಾರ್ ವಾಹನ ಅಪಘಾತ ಹಾಗೂ ವೇತನ ಮತ್ತು ಪಿಂಚಣಿ ಸಂಬಂಧಿತ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಮೀರ್ ಪಿ.ನಂದ್ಯಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.