
ಬಂಗಾರಪೇಟೆಯಲ್ಲಿ ಪ್ರತಿದಿನ ಸಂಜೆ 6 ರಿಂದ 9 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
ಬಂಗಾರಪೇಟೆ: ತಾಲ್ಲೂಕಿನಲ್ಲಿ ಪ್ರತಿದಿನ ಸಂಜೆ 6ರಿಂದ ರಾತ್ರಿ 9 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ‘ನಿರಂತರ ಜ್ಯೋತಿ’ ಯೋಜನೆಯಡಿ ತಡೆರಹಿತ ವಿದ್ಯುತ್ ನೀಡಬೇಕಿದ್ದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನೆಯಲ್ಲಿ ಅಡುಗೆ ತಯಾರಿಕೆ, ದೈನಂದಿನ ಗೃಹ ಕೆಲಸಗಳ ನಿರ್ವಹಣೆ ಹಾಗೂ ಶಾಲಾ–ಕಾಲೇಜು ಮಕ್ಕಳ ಓದಿಗೆ ತೊಂದರೆಯಾಗಿದೆ. ಪರೀಕ್ಷೆ ಹತ್ತಿರವಾಗುತ್ತಿರುವ ಈ ಸಮಯದಲ್ಲಿ ವಿದ್ಯುತ್ ಕಡಿತವಾಗುತ್ತಿರುವುದರಿಂದ ಮಕ್ಕಳು ಕತ್ತಲಲ್ಲೇ ಓದುವ ಅನಿವಾರ್ಯತೆಗೆ ಸಿಲುಕಿದ್ದಾರೆ.
ನಿರಂತರ ಜ್ಯೋತಿ ಮಾರ್ಗದಲ್ಲೂ ವಿದ್ಯುತ್ ಕಡಿತಗೊಳ್ಳುತ್ತಿರುವುದು ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆಯಾಗಿದೆ. ಸಂಬಂಧಪಟ್ಟ ಬೆಸ್ಕಾಂ ಹಿರಿಯ ಅಧಿಕಾರಿಗಳು ತಕ್ಷಣವೇ ಈ ಸಮಸ್ಯೆ ಪರಿಶೀಲಿಸಿ, ಸಂಜೆ ವೇಳೆ ತಡೆರಹಿತ ವಿದ್ಯುತ್ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ.