ಅಚ್ಚುಕಟ್ಟು ಪ್ರದೇಶಕ್ಕೆ ಭದ್ರಾ ಜಲಾಶಯದ ನೀರು ಹರಿಸಲು ಆಗ್ರಹ:BJPಯಿಂದ ಪ್ರತಿಭಟನೆ
ದಾವಣಗೆರೆ: ಭದ್ರಾ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಆಗ್ರಹಿಸಿ ಹಾಗೂ ಮೇಲ್ದಂಡೆ ನಾಲೆಯ ಮೂಲಕ ಚಿತ್ರದುರ್ಗ ಜಿಲ್ಲೆಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದರು.
ನಗರದ ಹೊರವಲಯದ ಬಾಡಾ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೀರು ಹರಿಸುವ ತೀರ್ಮಾನ ಪ್ರಕಟಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟುಹಿಡಿದರು.
ಹೆದ್ದಾರಿಯ ಒಂದು ಬದಿಯಲ್ಲಿ ಧರಣಿ ಕುಳಿತುಕೊಳ್ಳಲು ಪ್ರಯತ್ನಿಸಿದ ಪ್ರತಿಭಟನಕಾರರು ಸರ್ವಿಸ್ ರಸ್ತೆಯಲ್ಲಿ ಅಡುಗೆ ಮಾಡಲು ಮುಂದಾದರು. ಇದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಅಡುಗೆ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.
ರೈತರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಉಂಟಾಯಿತು. ಇದರಲ್ಲಿ ಹರಿಹರ ಸಿಪಿಐ ಸುರೇಶ್ ಸಗರಿ ಹಾಗೂ ರೈತ ಶಿವಯೋಗಿ ಎಂಬುವರು ಗಾಯಗೊಂಡರು.
‘ರಾಜ್ಯದಲ್ಲಿ ಬರ ಪರಿಸ್ಥಿತಿ ಭೀಕರವಾಗಿದೆ. ಭತ್ತ, ಕಬ್ಬು, ಅಡಿಕೆ ತೋಟಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣ ನೀರು ಹರಿಸಬೇಕು’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು.
‘ಚಿತ್ರದುರ್ಗ ಜಿಲ್ಲೆಗೆ ನೀರು ಕೊಡಲು ವಿರೋಧವಿಲ್ಲ. ಸಂಘರ್ಷವನ್ನು ರೈತರು ಇಷ್ಟಪಡುವುದಿಲ್ಲ. ಆದರೆ, ಇದು ಯಾವ ಸಭೆಯಲ್ಲಿ ತೀರ್ಮಾನ ಆಗಿದ್ದು ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು. ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸದೇ 3 ಟಿಎಂಸಿ ಅಡಿ ನೀರನ್ನು ಕೊಟ್ಟಿದ್ದು ಸರಿಯಲ್ಲ. ಭದ್ರಾ ಅಚ್ಚುಕಟ್ಟು ಪ್ರದೇಶದ ತೋಟಗಳು ಒಣಗುತ್ತಿರುವ ಸಂದರ್ಭದಲ್ಲಿ ಮತ್ತೊಂದು ಜಿಲ್ಲೆಗೆ ನೀರು ಕೊಡುವುದು ಅನ್ಯಾಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ತರುವ ಕಾಮಗಾರಿ ತ್ವರಿತಗೊಳಿಸಲು ಸರ್ಕಾರ ಇಚ್ಛಶಕ್ತಿ ಪ್ರದರ್ಶಿಸುತ್ತಿಲ್ಲ. ಎನ್.ಆರ್. ಪುರ ತಾಲ್ಲೂಕಿನ ಮುತ್ತಿನಕೊಪ್ಪ ಸಮೀಪದ ಕಾಮಗಾರಿಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ₹ 326 ಕೋಟಿ ಅನುದಾನ ನೀಡಿದ್ದರು. ಇದಕ್ಕೆ ಅಗತ್ಯವಿರುವ ₹30 ಕೋಟಿ ಅನುದಾನ ನೀಡಲು ರಾಜ್ಯ ಸರ್ಕಾರಕ್ಕೆ ಈವರೆಗೆ ಸಾಧ್ಯವಾಗಿಲ್ಲ’ ಎಂದು ಆರೋಪಿಸಿದರು.
ಮಾಜಿ ಶಾಸಕ ಬಸವರಾಜ ನಾಯ್ಕ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಪೂಜಾರ್, ಬಿಜೆಪಿ ಮುಖಂಡರಾದ ಕೊಳೇನಹಳ್ಳಿ ಬಿ.ಎಂ.ಸತೀಶ್, ಮಾಡಾಳ್ ಮಲ್ಲಿಕಾರ್ಜುನ್, ಲೋಕಿಕೆರೆ ನಾಗರಾಜ್ ಹಾಜರಿದ್ದರು.