
‘ಬೀರೂರಿಗೆ ಇಂದು ಸಿದ್ದರಾಮಯ್ಯ’
ಬೀರೂರು (ಕಡೂರು): ಪಟ್ಟಣದ ಕುರುಬರ ಸಂಘದ ವತಿಯಿಂದ ಪ್ರತಿಷ್ಠಾಪಿಸಿರುವ ದಾಸಶ್ರೇಷ್ಠ ಭಕ್ತ ಕನಕದಾಸರು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಕಂಚಿನ ಪ್ರತಿಮೆಗಳ ಅನಾವರಣ ಕಾರ್ಯಕ್ರಮಕ್ಕೆ ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಲಿದ್ದಾರೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.
ಶುಕ್ರವಾರ ಪಟ್ಟಣದ ಕೆಎಲ್‌ಕೆ ಮೈದಾನದಲ್ಲಿ ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸುತ್ತಿರುವ ವೇದಿಕೆ ಹಾಗೂ ಇತರ ಸಿದ್ಧತೆಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಸಿದ್ದರಾಮಯ್ಯ ಅವರು ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ತೀವ್ರ ಬರ ಎದುರಿಸುತ್ತಿರುವ ಕಡೂರು ಸೇರಿದಂತೆ ರಾಜ್ಯದ ಪ್ರತಿ ಮನೆಗೂ ಆಧಾರವಾಗಿವೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಅವರು ಪಾಲ್ಗೊಳ್ಳುತ್ತಿರುವ ಮೊದಲ ಸಾರ್ವಜನಿಕ ಕಾರ್ಯಕ್ರಮ ಇದಾಗಿದ್ದು, ಅಭಿಮಾನಿಗಳು ಅವರ ಆಗಮನವನ್ನು ಕಾತರದಿಂದ ಎದುರು ನೋಡುತ್ತಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬರುವ ನಿರೀಕ್ಷೆ ಇದೆ’ ಎಂದರು.
ಸಿದ್ದರಾಮಯ್ಯ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಹೊರಟು ಕಡೂರಿನ ಪೊಲೀಸ್ ತರಬೇತಿ ಕೇಂದ್ರಕ್ಕೆ ಬರಲಿದ್ದಾರೆ. ಅಲ್ಲಿಂದ ಬೀರೂರಿಗೆ ತೆರಳಿ 12 ಅಡಿ ಎತ್ತರದ ಸಂಗೊಳ್ಳಿ ರಾಯಣ್ಣ ಅವರ ಕಂಚಿನ ಪ್ರತಿಮೆ ಅನಾವರಣಗೊಳಿಸುವರು. ಬಳಿಕ ಕುರುಬರ ಸಂಘದ ಆವರಣದಲ್ಲಿ 7 ಅಡಿ ಎತ್ತರದ ಕನಕದಾಸರ ಕಂಚಿನ ಪ್ರತಿಮೆ ಅನಾವರಣಗೊಳಿಸಿ, ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಕನಕದಾಸರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಕುರುಬರ ಸಂಘದ ಫಲಕ ಉದ್ಘಾಟಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಅವರು ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನಾ ಸಮಿತಿ ನಾಮಫಲಕ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಶಾಸಕರಾದ ಎಚ್.ಡಿ. ತಮ್ಮಯ್ಯ, ಜಿ.ಎಚ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಬೀರೂರು ಮಾಜಿ ಶಾಸಕ ಕೆ.ಬಿ. ಮಲ್ಲಿಕಾರ್ಜುನ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಕಡೂರು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಭೋಗಪ್ಪ ಹಾಗೂ ಬೀರೂರು ಕುರುಬರ ಸಂಘದ ಅಧ್ಯಕ್ಷ ಎಸ್.ಎಚ್. ತಿಮ್ಮಯ್ಯ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ 7–8 ಸಾವಿರ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದ್ದು, ಅವರಿಗಾಗಿ ಆಸನ ವ್ಯವಸ್ಥೆ ಮಾಡಲಾಗಿದೆ. ಊಟ, ಉಪಚಾರದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲ ಅಭಿಮಾನಿಗಳು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸುತ್ತೇನೆ ಎಂದು ಅವರು ಹೇಳಿದರು.
ಬೀರೂರು ಕುರುಬರ ಸಂಘದ ಅಧ್ಯಕ್ಷ ಎಸ್.ಎಚ್. ತಿಮ್ಮಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ. ನಾಗರಾಜ್, ಪುರಸಭೆ ಮಾಜಿ ಅಧ್ಯಕ್ಷರಾದ ಬಿ.ಪಿ. ನಂಜುಂಡಪ್ಪ, ಬಿ.ಕೆ. ಶಶಿಧರ್, ಸಮಾಜದ ಮುಖಂಡರಾದ ಪುಟ್ಟಸ್ವಾಮಿ, ನಂಜುಂಡಪ್ಪ, ಪುನಿತ್‌ಕುಮಾರ್ ಹಾಗೂ ಉಮಾಶಂಕರ್ ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260905-126-617900924