
ತುಳುವನ್ನು ಅಧಿಕೃತ ಭಾಷೆಯಾಗಿ ಘೋಷಿಸಿ ಎಂದು ಡಾ. ಆಕಾಶ್ ರಾಜ್ ಜೈನ್ ಆಗ್ರಹ
ಉಡುಪಿ: ಕರ್ನಾಟಕದ ಪ್ರಾಚೀನ ಹಾಗೂ ಶ್ರೀಮಂತ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಗೆ ರಾಜ್ಯದ ಹೆಚ್ಚುವರಿ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಡಾ. ಆಕಾಶ್ ರಾಜ್ ಜೈನ್ ಅಳುಪ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ತುಳು ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ತುಳು ಅಕಾಡೆಮಿಗೆ ತುಳು ಭಾಷಾ ಅಭಿವೃದ್ಧಿ ಪ್ರಾಧಿಕಾರದ ಸ್ಥಾನಮಾನ ನೀಡಬೇಕು ಎಂದೂ ಒತ್ತಾಯಿಸಿದರು.
ತುಳು ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಬೇಕು, ತುಳು ಭಾಷೆಯ ಅಭಿವೃದ್ಧಿ, ಸಂಶೋಧನೆ, ಶಿಕ್ಷಣ, ಲಿಪಿ, ಸಾಹಿತ್ಯ, ಡಿಜಿಟಲೀಕರಣ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ವಾರ್ಷಿಕ ಕನಿಷ್ಠ ₹5 ಕೋಟಿ ಅನುದಾನ ನೀಡಬೇಕು ಎಂದು ಹೇಳಿದರು.
ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ಎರಡನೇ ಅಧಿಕೃತ ರಾಜ್ಯ ಭಾಷೆಯಾಗಿ ಘೋಷಿಸುವ ನಿರ್ಣಯ ಕೈಗೊಳ್ಳಬೇಕು ಎಂದೂ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಗಣನಾಥ ಎಕ್ಕಾರು, ಜೈ ತುಳುನಾಡು ಉಡುಪಿ ಘಟಕ ಅಧ್ಯಕ್ಷ ಸಂತೋಷ್ ಎನ್.ಎಸ್. ಕಟಪಾಡಿ, ಈಶ್ವರ್ ಶೆಟ್ಟಿ, ಅಂಬಿಕಾ ರಾವ್ ಉಪಸ್ಥಿತರಿದ್ದರು.