
ಪಂಚಾಯಿತಿಯಿಂದ ಸಂಸತ್ವರೆಗೆ ನಾಯಕರು ಅಗತ್ಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಅಧ್ಯಕ್ಷರಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಮಂತ್ರಿಯ ಗೃಹ ಕಚೇರಿ ‘ಕೃಷ್ಣಾ’ಕ್ಕೆ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಅವರು ತೆರಳಿ, ಡಿ.ಕೆ. ಶಿವಕುಮಾರ್ ಅವರನ್ನು ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಿಸಿ ಪ್ರಮಾಣವಚನದ ಪ್ರತಿ ನೀಡಿದರು.
ನಂತರ ಮಾತನಾಡಿದ ಶಿವಕುಮಾರ್, ‘ಪಂಚಾಯಿತಿಯಿಂದ ಸಂಸತ್ವರೆಗೆ ನಾಯಕರು ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ’ ಎಂದರು.
ರಾಜಾಜಿನಗರದ ವಿದ್ಯಾವರ್ಧಕ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಮರಿಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಎಂಜಿನಿಯರ್ ಹಾಗೂ ವೈದ್ಯಕೀಯ ಸೀಟುಗಳಲ್ಲಿನ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು, ಸಂಸ್ಥೆಯ ನಿವೃತ್ತ ನೌಕರರಿಗೆ ಪಿಂಚಣಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಳಿ ಸಿಂಧ್ಯ ಮನವಿ ಮಾಡಿದರು.
‘ಧಾರವಾಡ, ವಿಜಯಪುರದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ಗೆ ನೀಡಿದ್ದ ಜಾಗದ ಗುತ್ತಿಗೆ ಅವಧಿ ಮುಗಿದಿದೆ. ಅವಧಿಯನ್ನು ಮುಂದುವರಿಸಬೇಕು. ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಕೂಡ ಬಿಡುಗಡೆ ಮಾಡಬೇಕು’ ಎಂಬ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ವಿವೇಚನಾ ಕೋಟಾದಿಂದ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೊಂಡಜ್ಜಿ ಷಣ್ಮುಖಪ್ಪ ಮತ್ತು ಪದಾಧಿಕಾರಿಗಳು ಇದ್ದರು.