
ಕೇರಳಂನಲ್ಲಿ ಹಠಾತ್ ಪ್ರವಾಹ, ಭೂಕುಸಿತ: ಐವರ ಸಾವು, ಇಬ್ಬರು ನಾಪತ್ತೆ
ತಿರುವನಂತಪುರ: ಕೇರಳಂನಲ್ಲಿ ಮಳೆಯ ಆರ್ಭಟ ತೀವ್ರಗೊಂಡಿದ್ದು, ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆ ಗಂಟೆಗೊಮ್ಮೆ ಪರಿಸ್ಥಿತಿಯ ಪರಾಮರ್ಶೆ ನಡೆಸುವಂತೆ ಮುಖ್ಯಮಂತ್ರಿ ವಿ.ಡಿ. ಸತೀಶನ್ ಆದೇಶಿಸಿದ್ದಾರೆ.
ಸಿಎಂ ನಿರ್ದೇಶನದ ಮೇರೆಗೆ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ವಿಘ್ನೇಶ್ವರಿ ಐಎಎಸ್ ಅವರು ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಇಡುಕ್ಕಿ ಮತ್ತು ಕೊಟ್ಟಾಯಂನಲ್ಲಿ ಹವಾಮಾನ ಪರಿಸ್ಥಿತಿಯ ಕುರಿತು ಎಸ್‌ಎಂಎಸ್ ಮೂಲಕ ಎಚ್ಚರಿಕೆ ನೀಡಲಾಗಿದೆ. ಅಗತ್ಯ ಬಿದ್ದಲ್ಲಿ ಜನರನ್ನು ತಕ್ಷಣವೇ ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಕೊಟ್ಟಪ್ಪುಳ ನದಿಯಲ್ಲಿ ಕೊಚ್ಚಿಹೋದ ಐವರು: ಇಬ್ಬರ ಸಾವು
ಮಲಪ್ಪುರಂ ಜಿಲ್ಲೆಯ ನಿಲಂಬೂರ್-ಅಮರಂಬಲಂ ಪ್ರದೇಶದ ಕೊಟ್ಟಪ್ಪುಳ ನದಿಯಲ್ಲಿ ದಿಢೀರ್ ಪ್ರವಾಹಕ್ಕೆ ಸಿಲುಕಿ ಐವರು ಕೊಚ್ಚಿಹೋಗಿದ್ದಾರೆ. ವಂದೂರ್ ಮೂಲದ ಈ ಐವರ ಗುಂಪು ನದಿಯಲ್ಲಿ ಸ್ನಾನಕ್ಕಿಳಿದಾಗ ಒಮ್ಮೆಲೇ ನೀರಿನ ಮಟ್ಟ ಹೆಚ್ಚಾಗಿದೆ. ದುರಂತದಲ್ಲಿ ಇಬ್ಬರು ಮೃತಪಟ್ಟು , ಮತ್ತಿಬ್ಬರು ನಾಪತ್ತೆಯಾಗಿದ್ದಾರೆ.
ಸ್ಥಳೀಯರೊಬ್ಬರು ಓರ್ವನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನುಳಿದ ಇಬ್ಬರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೂ ಕುಸಿತ: ತಮಿಳುನಾಡಿನ ಮಹಿಳೆ ಸಾವು
ಕೊಟ್ಟಾಯಂ ಜಿಲ್ಲೆಯಲ್ಲಿ, ಟೀಕೋಯ್ ಬಳಿ ಭೂಕುಸಿತ ಸಂಭವಿಸಿದ್ದು, ತಮಿಳುನಾಡಿನ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಸ್ನೇಹಿತ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಚೆನ್ನೈನ ಜವಾಹರ್ ನಗರದ ನಿವಾಸಿ ಸಂಗೀತಾ ಅರುಲ್ ಲಾಲ್ (35) ಎಂದು ಗುರುತಿಸಲಾಗಿದೆ. ತಮಿಳುನಾಡಿನವರೇ ಆದ ಸಂಗೀತಾ ಮತ್ತು ಆಕೆಯ ಸ್ನೇಹಿತ ದ್ವಿಚಕ್ರ ವಾಹನದಲ್ಲಿ ವಾಗಮೋನ್‌ನಿಂದ ಹಿಂತಿರುಗುತ್ತಿದ್ದಾಗ ಸಂಜೆ ಭೂಕುಸಿತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆಗೆ ಮಣ್ಣು ಬಿದ್ದು ಸ್ಕೂಟರ್ ಸವಾರಿ ಮಾಡುತ್ತಿದ್ದ ಸಂಗೀತಾ ಸಿಲುಕಿಕೊಂಡರು. ಆಕೆಯ ಸ್ನೇಹಿತ ಗಾಯಗಳೊಂದಿಗೆ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಇಡುಕ್ಕಿ ಜಿಲ್ಲೆಯ ಕೊಟ್ಟಕಂಬೂರಿನಲ್ಲಿ ಶೆಡ್ ಒಂದರಲ್ಲಿ ಆಶ್ರಯ ಪಡೆದಿದ್ದ ಮೂವರ ಮೇಲೆ ಮಣ್ಣು ಕುಸಿದುಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೆಂಜ್ ಅಲರ್ಟ್ ಘೋಷಣೆ:
ಮುಂದಿನ ನಾಲ್ಕು ದಿನಗಳಲ್ಲಿ ಕೇರಳಂನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಮುನ್ಸೂಚನೆ ನೀಡಿದೆ. ಜತೆಗೆ ಕೊಟ್ಟಾಯಂ ಮತ್ತು ಇಡುಕ್ಕಿಯಲ್ಲಿ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.