ರಾಜ್ಯದ ಹಲವೆಡೆ ಒಂದು ವಾರ ಮಳೆಯಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವೆಡೆ ಗುರುವಾರದಿಂದ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಗುರುವಾರ 13 ಜಿಲ್ಲೆಗಳಿಗೆ ಹಾಗೂ ಶುಕ್ರವಾರ 26 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಇದೇ 19 ಮತ್ತು 20ರಂದು ಕರಾವಳಿಯ ಮೂರು ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಗುರುವಾರ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದ ಕೆಲ ಜಿಲ್ಲೆಗಳಲ್ಲಿ ಇದೇ 19 ರಿಂದ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಗುರುವಾರ ಸಾಧಾರಣ ಮಳೆಯಾಗುವ ಸಂಭವವಿದೆ. 19ರಿಂದ ಈ ಭಾಗದ ಮತ್ತಷ್ಟು ಜಿಲ್ಲೆಗಳಲ್ಲಿ ಮಳೆ ವ್ಯಾಪಿಸಿಕೊಳ್ಳುವ ಸಾಧ್ಯತೆ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ.