
ಗಣೇಶ ಹಬ್ಬಕ್ಕೆ ಕೆಕೆಆರ್‌ಟಿಸಿಯಿಂದ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್
ಕಲಬುರಗಿ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 10 ರಿಂದ 13ರವರೆಗೆ ಕೆಕೆಆರ್‌ಟಿಸಿಯಿಂದ ತಾಲ್ಲೂಕು/ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿಗೆ ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್‍ಗಳ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಅದೇ ರೀತಿ ಸೆಪ್ಟೆಂಬರ್ 11, 12 ಮತ್ತು 13 ರಂದು ಬೆಂಗಳೂರಿನಿಂದ ಕೆಕೆಆರ್‌ಟಿಸಿ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ದೈನಂದಿನ ಕಾರ್ಯಾಚರಣೆಯಲ್ಲಿರುವ 200 ಬಸ್‌ಗಳನ್ನು ಹೊರತುಪಡಿಸಿ, 300 ಹೆಚ್ಚುವರಿ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಹಬ್ಬ ಮುಗಿದ ನಂತರ ಸೆಪ್ಟೆಂಬರ್ 15ರಿಂದ 20 ರವರೆಗೆ ಕೆಕೆಆರ್‌ಟಿಸಿ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗನುಗುಣವಾಗಿ ನಿಗಮದಿಂದ ಹೆಚ್ಚುವರಿ ವಾಹನಗಳನ್ನು ಬಿಡಲಾಗುತ್ತದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿ ಇರುವ 22 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮುಖಾಂತರ ಮುಂಗಡವಾಗಿ ಆಸನ ಕಾಯ್ದಿರಿಸಿಕೊಳ್ಳಬಹುದಾಗಿದೆ.