
ಶಿಕ್ಷಕರ, ಪದವೀಧರರ ಕ್ಷೇತ್ರದ ಪರಿಷತ್ ಚುನಾವಣಾ ದಿನಾಂಕ ಘೋಷಣೆ: ಇಲ್ಲಿದೆ ವಿವರ
ಬೆಂಗಳೂರು: ವಿಧಾನಪರಿಷತ್‌ನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರರ ಕ್ಷೇತ್ರಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ.
ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಕ್ಷೇತ್ರಗಳಲ್ಲಿ ಮಾದರಿ ನೀತಿಸಂಹಿತೆ ತಕ್ಷಣದಿಂದ ಜಾರಿಗೆ ಬಂದಿದೆ.
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚಿದಾನಂದ ಎಂ. ಗೌಡ, ಪಶ್ಚಿಮ ಪದವೀಧರ ಕ್ಷೇತ್ರದ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಶಶೀಲ್ ಜಿ.ನಮೋಶಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ ಅವರ ಅವಧಿ ನವೆಂಬರ್ 11ಕ್ಕೆ ಕೊನೆ ಆಗಲಿದೆ.
ವಿಧಾನಪರಿಷತ್‌ನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳಿಗೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ವಿಧಾನಪರಿಷತ್‌ನ ಹಾಲಿ ಸದಸ್ಯ ಪುಟ್ಟಣ್ಣ ಅವರನ್ನೇ ಕಣಕ್ಕೆ ಇಳಿಸಲಾಗುತ್ತಿದೆ.
ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆ ಮಠ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ವಿಧಾನ ಪರಿಷತ್‌ನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಈಚೆಗೆ ಪ್ರಕಟಿಸಿದ್ದು, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.
ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಮೂಲಕ, ಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಯಲಿದೆ.
ಚುನಾವಣೆ ಅಧಿಸೂಚನೆ: ಸೆಪ್ಟೆಂಬರ್ 29, 2026
ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಅಕ್ಟೋಬರ್ 6, 2026
ನಾಮಪತ್ರ ಪರಿಶೀಲನೆ: ಅಕ್ಟೋಬರ್ 7, 2026
ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಅಕ್ಟೋಬರ್ 9, 2026
ಮತದಾನ: ಅಕ್ಟೋಬರ್ 23, 2026
ಮತ ಎಣಿಕೆ: ಅಕ್ಟೋಬರ್ 27, 2026