
ಬಯಲುಸೀಮೆ ಜಿಲ್ಲೆಗಳಲ್ಲಿ ತೀವ್ರ ಬರ: ರೈತರು ಕಂಗಾಲು
ಚಿಕ್ಕಬಳ್ಳಾಪುರ: ಬಯಲುಸೀಮೆ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಕೊರತೆ ಹಾಗೂ ಅಂತರ್ಜಲ ಮಟ್ಟ ಕುಸಿತದಿಂದ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ರೈತರು, ಕೃಷಿ ಕಾರ್ಮಿಕರು ಮತ್ತು ಪಶುಪಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಆರ್. ತಿಳಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಮಳೆಯಾಗದೆ ಖಾರಿಫ್ ಬೆಳೆಗಳು ಒಣಗುತ್ತಿವೆ. ಮಾವು, ದಾಳಿಂಬೆ, ದ್ರಾಕ್ಷಿ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳುವುದು ರೈತರಿಗೆ ಸವಾಲಾಗಿದೆ. 1,000–1,500 ಅಡಿ ಆಳದವರೆಗೆ ಕೊಳವೆಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಇರುವ ಕೊಳವೆಬಾವಿಗಳಲ್ಲೂ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಬೆಳೆ ಉಳಿಸಿಕೊಳ್ಳುವುದು ಕಷ್ಟವಾಗಿದೆ ಎಂದು ಹೇಳಿದರು.
ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಎದುರಾಗಿದೆ. ಸ್ಥಳೀಯವಾಗಿ ಮೇವು ದೊರೆಯದೆ ಕುರಿ–ಮೇಕೆಗಳೊಂದಿಗೆ ಪಶುಪಾಲಕರು ದೂರದ ಪ್ರದೇಶಗಳಿಗೆ ವಲಸೆ ಹೋಗುವ ದುಃಸ್ಥಿತಿ ನಿರ್ಮಾಣವಾಗಿದೆ. ಮೇವು ಬೆಲೆ ಏರಿಕೆಯೂ ಅವರ ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ. ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಕೃಷಿ ಕಾರ್ಮಿಕರು ನಿರುದ್ಯೋಗಿಗಳಾಗಿದ್ದಾರೆ. ಉದ್ಯೋಗ ಅರಸಿ ಪಟ್ಟಣಗಳಿಗೆ ತೆರಳಿದರೂ ಅಲ್ಲಿಯೂ ಕಟ್ಟಡ ನಿರ್ಮಾಣವಾಗಿದೆ ಎಂದರು.
ಸರ್ಕಾರವು ಈ ಮೂರು ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು. ಪ್ರತಿ ಎಕರೆಗೆ ₹25 ಸಾವಿರ ಆರ್ಥಿಕ ನೆರವು, ಮಾವು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್, ಬೆಳೆ ನಷ್ಟದ ವೈಜ್ಞಾನಿಕ ಸಮೀಕ್ಷೆ ನಡೆಸಿ ವಿಮೆ ಹಾಗೂ ಪರಿಹಾರ ಬಿಡುಗಡೆ ಮಾಡಬೇಕು. ದಾಳಿಂಬೆ, ದ್ರಾಕ್ಷಿ ಮತ್ತು ಇತರ ತೋಟಗಾರಿಕೆ ಬೆಳೆಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಆಂಜನೇಯ ರೆಡ್ಡಿ ಒತ್ತಾಯಿಸಿದರು.
ಶಾಶ್ವತ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜಾನುವಾರುಗಳಿಗೆ ಕಡಿಮೆ ದರದಲ್ಲಿ ಮೇವು ಪೂರೈಸಬೇಕು. ಸರ್ಕಾರ ಭರವಸೆಗಳಿಗೆ ಸೀಮಿತವಾಗದೆ ತಕ್ಷಣ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.