
ಹಿರಿಯ ನಾಗರಿಕರು ಬದುಕಿನಲ್ಲಿ ಜೀವನೋತ್ಸಾಹ ಹೆಚ್ಚಿಸಿಕೊಳ್ಳಬೇಕು: ಶ್ರೀರೂಪಾ
ಚಾಮರಾಜನಗರ: ಹಿರಿಯ ನಾಗರಿಕರು ಬದುಕಿನಲ್ಲಿ ಜೀವನೋತ್ಸಾಹ ಹೆಚ್ಚಿಸಿಕೊಳ್ಳಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸುವ ಮೂಲಕ ಸಂತಸದ ಸಮಯ ಕಳೆಯಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸಲಹೆ ನೀಡಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಹಿರಿಯ ನಾಗರಿಕರು ವಯಸ್ಸು ಬದಿಗಿಟ್ಟು, ಸೋಲು–ಗೆಲುವು ಲೆಕ್ಕಿಸದೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಇಂತಹ ಚಟುವಟಿಕೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಹೆಚ್ಚು ಲವಲವಿಕೆಯಿಂದ ಬದುಕಬಹುದು ಎಂದು ಕಿವಿಮಾತು ಹೇಳಿದರು.
ಹಿರಿಯರ ಮೌಲ್ಯಯುತ ಜೀವನ ಆದರ್ಶಗಳು ಇಂದಿನ ಯುವಜನತೆಗೆ ಮಾರ್ಗದರ್ಶಿಯಾಗಲಿ. ಸಮಾಜ ಹಿರಿಯರನ್ನು ಕಡೆಗಣಿಸದೆ ಗೌರವದಿಂದ ನಡೆಸಿಕೊಳ್ಳಬೇಕು. ಹಿರಿಯ ನಾಗರಿಕರ ಅನುಭವಗಳು ಎಲ್ಲರಿಗೂ ದಾರಿದೀಪವಾಗಲಿ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಮಾತನಾಡಿ, ಪ್ರತಿವರ್ಷ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನ ಆಚರಿಸಲಾಗುತ್ತಿದ್ದು, ಅವರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ. ಹಿರಿಯ ನಾಗರಿಕರು ಸಮಾಜ ಹಾಗೂ ಕುಟುಂಬದ ಪ್ರಮುಖ ಆಧಾರಸ್ತಂಭ. ಗೌರವಯುತವಾಗಿ ಕಾಣಬೇಕು ಎಂದು ಸಲಹೆ ನೀಡಿದರು.
ಜೀವನದುದ್ದಕ್ಕೂ ಕಷ್ಟ, ಸವಾಲುಗಳನ್ನು ಧೈರ್ಯವಾಗಿ ಎದುರಿಸಿ ಬದುಕಿನ ಇಳಿ ಸಂಜೆಗೆ ತಲುಪಿರುವ ಹಿರಿಯರನ್ನು ಈಚೆಗೆ ಸಮಾಜ ತುಚ್ಛವಾಗಿ ಕಾಣುತ್ತಿರುವುದು ಬೇಸರದ ಸಂಗತಿ. ಹಿರಿಯ ನಾಗರಿಕರ ಅನುಭವ ಯುವಜನಾಂಗಕ್ಕೆ ಪ್ರೇರಣೆಯಾಗಬೇಕು.ಸೌಲಭ್ಯಗಳನ್ನು ಹಿರಿಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಹೇಳಿದರು.
ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ.ಎನ್.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸುಭದ್ರಾ ದೇವಿ ಉಪಸ್ಥಿತರಿದ್ದರು.
60 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬಿರುಸಿನ ನಡಿಗೆ, ಮ್ಯೂಸಿಕಲ್ ಚೇರ್ ಹಾಗೂ ಬಕೆಟ್‍ನಲ್ಲಿ ಬಾಲ್ ಎಸೆಯುವ ಸ್ಪರ್ಧೆ, ಗಾಯನ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳು ನಡೆದವು. 150ಕ್ಕೂ ಅಧಿಕ ಹಿರಿಯ ನಾಗರಿಕರು ಭಾಗವಹಿಸಿದ್ದರು.