ಗದಗ| ಗೃಹಲಕ್ಷ್ಮಿ ಯೋಜನೆಯಲ್ಲಿ ಹಣ ಸೋರಿಕೆ ತಡೆಗಟ್ಟಲು ಕ್ರಮ: ಬಿ.ಬಿ. ಅಸೂಟಿ

ಗದಗ| ಗೃಹಲಕ್ಷ್ಮಿ ಯೋಜನೆಯಲ್ಲಿ ಹಣ ಸೋರಿಕೆ ತಡೆಗಟ್ಟಲು ಕ್ರಮ: ಬಿ.ಬಿ. ಅಸೂಟಿ

ಗದಗ| ಗೃಹಲಕ್ಷ್ಮಿ ಯೋಜನೆಯಲ್ಲಿ ಹಣ ಸೋರಿಕೆ ತಡೆಗಟ್ಟಲು ಕ್ರಮ: ಬಿ.ಬಿ. ಅಸೂಟಿ

ಗದಗ: ‘ಗೃಹಲಕ್ಷ್ಮಿ ಯೋಜನೆಯ ಉದ್ದೇಶಕ್ಕೆ ಧಕ್ಕೆಯಾಗದಂತೆ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸುವುದು ಹಾಗೂ ಸರ್ಕಾರದ ಹಣ ಸೋರಿಕೆಯಾಗದಂತೆ ತಡೆಯುವುದು ಅವಶ್ಯ’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನಾ ಅರ್ಜಿಗಳ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಯೋಜನೆ ಜಾರಿಯಾಗಿ ಮೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಫಲಾನುಭವಿಗಳ ವಿವರಗಳನ್ನು ಮರುಪರಿಶೀಲಿಸುವ ಅಗತ್ಯವಿದೆ. ಫಲಾನುಭವಿಗಳು ಮೃತಪಟ್ಟಿದ್ದರೂ,ಅವರ ಕುಟುಂಬದವರು ಹಣ ಪಡೆಯುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹಾಗಾಗಿ, ಫಲಾನುಭವಿಗಳ ನೈಜ ಸ್ಥಿತಿ ಪರಿಶೀಲಿಸಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ಮುಂದುವರಿಯುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

‘ಅನ್ಯ ರಾಜ್ಯದವರು ಹಾಗೂ ವಿವಿಧ ಕಾರಣಗಳಿಂದ ಯೋಜನೆಗೆ ಅನರ್ಹರಾಗಿರುವವರು ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳನ್ನು ಪತ್ತೆ ಮಾಡಬೇಕು. ಇದಕ್ಕಾಗಿ, ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು. ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ನೈಜ ಸ್ಥಿತಿ ಖಚಿತಪಡಿಸಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಫಲಾನುಭವಿಗಳಿಗೆ ನೀಡುತ್ತಿರುವ ₹2,000 ನೆರವನ್ನು ಮಹಿಳೆಯರು ಸ್ವಾವಲಂಬನೆ, ಮಕ್ಕಳ ವಿದ್ಯಾಭ್ಯಾಸ, ಕೃಷಿ ಚಟುವಟಿಕೆ, ಹೈನುಗಾರಿಕೆ, ವೈದ್ಯಕೀಯ ವೆಚ್ಚ ಸೇರಿದಂತೆ ವಿವಿಧ ಅಗತ್ಯಗಳಿಗೆ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗದಗ ಜಿಲ್ಲೆಯಲ್ಲಿ 2.74 ಲಕ್ಷ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಬಿ. ಅಳಗವಾಡಿ, ತಾಲ್ಲೂಕು ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ದೇವಪ್ಪ ಮುರನಾಳ, ನಾಗರಾಜ ಮಡಿವಾಳರ, ನೇತ್ರಾ ಹರ್ತಿ ಇದ್ದರು.

ಪಾರದರ್ಶಕತೆ ಕಾಯ್ದುಕೊಳ್ಳಲು ಸಲಹೆ

‘ಮರುಪರಿಶೀಲನಾ ಅರ್ಜಿಗಳ ವಿಲೇವಾರಿ ಸಂದರ್ಭದಲ್ಲಿ ಫಲಾನುಭವಿಗಳ ದಾಖಲೆಗಳು ಹಾಗೂ ಅರ್ಹತಾ ಮಾನದಂಡಗಳನ್ನು ಸಮಗ್ರವಾಗಿ ಗಮನಿಸಬೇಕು. ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಅವರ ಅರ್ಜಿಗಳನ್ನು ಪಾರದರ್ಶಕವಾಗಿ ವಿಲೇವಾರಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

‘ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳೆಯರಿಗೆ ಸರ್ಕಾರದಿಂದ ದೊರೆಯುತ್ತಿರುವ ಆರ್ಥಿಕ ನೆರವು ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿದೆ. ಯೋಜನೆಯ ಉದ್ದೇಶಕ್ಕೆ ಧಕ್ಕೆಯಾಗದಂತೆ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸಕಾಲದಲ್ಲಿ ಸೌಲಭ್ಯ ದೊರೆಯುವಂತೆ ಕ್ರಮವಹಿಸಬೇಕು’ ಎಂದರು.

ಗೃಹಲಕ್ಷ್ಮೀ ಯೋಜನೆಯ ಸೌಲಭ್ಯವು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವಾಗುತ್ತಿರುವ ಹಿನ್ನೆಲೆಯಲ್ಲಿ ಅರ್ಹ ಪ್ರತಿಯೊಬ್ಬ ಫಲಾನುಭವಿಗೂ ಯೋಜನೆಯ ಪ್ರಯೋಜನ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಜಿಲ್ಲಾಧಿಕಾರಿ ಎಂದು ಸಿ.ಎನ್. ಶ್ರೀಧರ್ ಹೇಳಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ