
ಹೆಬ್ರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ: ಸ್ಥಳ ಪರಿಶೀಲನೆ
ಹೆಬ್ರಿ: ತಾಲ್ಲೂಕಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಲಿರುವ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ, ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಹೆಲಿಪ್ಯಾಡ್, ಸಭಾ ಕಾರ್ಯಕ್ರಮ ನಡೆಯಲಿರುವ ಸ್ಥಳದ ಪರಿಶೀಲನೆ ನಡೆಸಿತು.
ರಾಜ್ಯ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮಾಹಿತಿ ನೀಡಿದರು. ಕೈಗೊಳ್ಳಬೇಕಾದ ಭದ್ರತಾ ವ್ಯವಸ್ಥೆ, ಸಂಚಾರ ನಿರ್ವಹಣೆ, ಪೂರ್ವಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.
ವಿವಿಧ ಇಲಾಖೆಗಳ ಅಧಿಕಾರಿಗಳು, ಉದ್ಯಮಿ ಹೆಬ್ರಿ ಸತೀಶ್ ಪೈ, ಚಾರ ವಾದಿರಾಜ ಶೆಟ್ಟಿ, ಕಾಂಗ್ರೆಸ್ ಪ್ರಮುಖರಾದ ಪ್ರವೀಣ್ ಬಲ್ಲಾಳ್, ದಿನೇಶ್ ಶೆಟ್ಟಿ ಹುತ್ತುರ್ಕೆ, ಶಂಕರ ಶೇರಿಗಾರ್, ಎಚ್. ಜನಾರ್ದನ್, ನಿಲೇಶ್ ಪೂಜಾರಿ, ತಾಲ್ಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಸುಕುಮಾರ್ ಮುನಿಯಾಲ್ ಭಾಗವಹಿಸಿದ್ದರು.