
ಗದಗ ತಾಲ್ಲೂಕಿಗೆ ಅನ್ಯಾಯ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರೋಪ
ಗದಗ: ‘ಗದುಗಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದ್ದರೂ ಗದಗ ತಾಲ್ಲೂಕನ್ನು ಬರಪೀಡಿತವೆಂದು ಘೋಷಿಸದಿರುವುದು ರೈತರಿಗೆ ಮಾಡಿದ ಅನ್ಯಾಯ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಆರೋಪಿಸಿದ್ದಾರೆ.
‘ತಾಲ್ಲೂಕಿನಲ್ಲಿ ಶೇ 60ರಷ್ಟು ಮಳೆ ಕೊರತೆ ಇದೆ ಎಂಬುದಾಗಿ ಜಿಲ್ಲಾಡಳಿತ ವರದಿ ನೀಡಿದೆ. ಆದರೂ ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಹೊರಗಿಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಯಾವ ಆಧಾರದಲ್ಲಿ ಈ ಪಟ್ಟಿ ತಯಾರಿಸಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು’ ಎಂದಿದ್ದಾರೆ.
‘ಗದಗ ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ, ರಾಜ್ಯ ಸರ್ಕಾರವು ರೈತರ ಬಾಳಿನೊಂದಿಗೆ ಚೆಲ್ಲಾಟ ಆಡುತ್ತಿರುವುದು ಖಂಡನೀಯ. ಈ ಸಂಕಷ್ಟದ ಸಮಯದಲ್ಲಿ ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.