
ಸಾಂಪ್ರದಾಯಿಕ ಕಂಬಳಕ್ಕೆ ವಿಶೇಷ ಅನುದಾನ ನೀಡಲು ಆಗ್ರಹ
ಉಡುಪಿ: ಧಾರ್ಮಿಕ ನಂಟನ್ನು ಹೊಂದಿರುವ ಕರಾವಳಿಯ ಜನಪದ ಕ್ರೀಡೆ ಸಾಂಪ್ರದಾಯಿಕ ಕಂಬಳಕ್ಕೆ ವಿಶೇಷ ಅನುದಾನ ನೀಡಬೇಕು ಎಂದು ಸಾಂಪ್ರದಾಯಿಕ ಕಂಬಳ ಸಮಿತಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸುಮಾರು 100ಕ್ಕೂ ಹೆಚ್ಚು ಸಾಂಪ್ರದಾಯಿಕ ಕಂಬಳಗಳು ನಡೆಯುತ್ತಿದ್ದರೂ ಸರ್ಕಾರ ಇಲ್ಲಿಯವರೆಗೆ ಅನುದಾನ ನೀಡಿಲ್ಲ ಎಂದರು.
ಸಾವಿರಾರು ವರ್ಷಗಳ ಇತಿಹಾಸವಿರುವ ಸಾಂಪ್ರದಾಯಿಕ ಕಂಬಳಕ್ಕೆ ಅನುದಾನ ನೀಡಿದರೆ ರೈತರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.
ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಹೇಳಿರುವುದು ಸಂತಸದ ವಿಷಯ. ಅದೇ ರೀತಿ ಸಾಂಪ್ರದಾಯಿಕ ಕಂಬಳಕ್ಕೂ ಉತ್ತೇಜನ ನೀಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಸುಧಾಕರ್ ಹೆಗ್ಡೆ, ಅಭಿಜಿತ್ ಪಾಂಡೇಶ್ವರ ಉಪಸ್ಥಿತರಿದ್ದರು.