ಪಾಣಾಜೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 16.7 ಸೆಂ.ಮೀ ಮಳೆ ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಪಾಣಾಜೆಯಲ್ಲಿ ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿ ಮೀಟರ್ ಮಳೆಯಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಶುಕ್ರವಾರ ತಡರಾತ್ರಿಯಿಂದ ಬಿರುಸಿನ ಮಳೆಯಾಗಿದೆ. ಕೆಲವು ಭಾಗಗಳಲ್ಲಿ ಮುಂಜಾನೆವರೆಗೆ ಧಾರಾಕಾರ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಸಂಜೆ ಅಥವಾ ರಾತ್ರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಾಣಾಜೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಐದು ಕಡೆಗಳಲ್ಲಿ ರಾಜ್ಯದ ಗರಿಷ್ಠ ಪ್ರಮಾಣದ ಮಳೆ ದಾಖಲಾಗಿದೆ.