
ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್. ಪೊನ್ನಣ್ಣ ಚಾಲನೆ
ನಾಪೋಕ್ಲು: ಸಮೀಪದ ನರಿಯಂದಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಚೇಲಾವರ ಭಾಗಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಶುಕ್ರವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಚೇಲಾವರ ಶಾಲೆಯ ಬಳಿ ಶಾಸಕರ ವಿಶೇಷ ಅನುದಾನದ ₹25 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸೇತುವೆಯನ್ನು ಅವರು ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳಿಸಿದರು.
ಬಳಿಕ ಗ್ರಾಮದ ಪ್ರಸಿದ್ಧ ಪೊನ್ನೋಲ ಶಾಸ್ತಾವು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮ್ಮ ಶಾಸಕರ ಅನುದಾನದ ₹5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಡಿಯತ್ ನಾಡ್ ಪೊನ್ನೊಲ ಶಾಸ್ತಾವು ಪುದಿಯೋದಿ ದೇವಸ್ಥಾನದ ಆವರಣ ರಸ್ತೆಯನ್ನು ಉದ್ಘಾಟಿಸಿದರು. ಇದಕ್ಕೂ ಮುನ್ನ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕರು, ₹20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.