
ಅಧಿಕಾರ ಯಾರಿಗೆ ಎಂಬುದನ್ನು ಜನರು ನಿರ್ಧರಿಸುತ್ತಾರೆ, ಚುನಾವಣಾ ಆಯೋಗವಲ್ಲ: ಠಾಕ್ರೆ
ಮುಂಬೈ: ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಲ್ಲಿ, ಮಹಾರಾಷ್ಟ್ರದ ಪ್ರಮುಖ ವಿರೋಧ ಪಕ್ಷಗಳಾದ ಶಿವಸೇನಾ (ಯುಬಿಟಿ), ಮಹಾರಾಷ್ಟ್ರ ನವ ನಿರ್ಮಾಣ ಸೇನಾ, ನ್ಯಾಷನಲಿಷ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಹಾಗೂ ಕಾಂಗ್ರೆಸ್ ಮುಂಬೈನಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿವೆ.
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಜಂಟಿ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ.
ವಿರೋಧ ಪಕ್ಷಗಳ ಬೆಂಬಲಿಗರು ಭಾರಿ ಸಂಖ್ಯೆಯಲ್ಲಿ ಆಜಾದ್ ಮೈದಾನದತ್ತ ಸಾಗುತ್ತಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿರುವ ರಾಜ್ ಠಾಕ್ರೆ, ʼಅಧಿಕಾರದಲ್ಲಿ ಯಾರು ಇರಬೇಕು ಎಂಬುದನ್ನು ನಿರ್ಧರಿಸುವುದು ಚುನಾವಣಾ ಆಯೋಗವಲ್ಲ; ಜನರು. ಚುನಾವಣಾ ಆಯೋಗ ತಮ್ಮೊಂದಿಗಿದೆ ಎಂದು ತಿಳಿದಿರುವ ಬಿಜೆಪಿ, ತಾನು ಏನು ಬೇಕಾದರೂ ಮಾಡಬಹುದು ಎಂದುಕೊಂಡಿದೆʼ ಎಂದು ಗುಡುಗಿದ್ದಾರೆ.
ʼಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಂಪೂರ್ಣ ಅಕ್ರಮವಾಗಿದ್ದು, ಮಹಾರಾಷ್ಟ್ರದಲ್ಲಿ ಕೂಡಲೇ ಅದನ್ನು ರದ್ದು ಮಾಡಬೇಕುʼ ಎಂದು ಒತ್ತಾಯಿಸಿದ್ದಾರೆ. ಹಾಗೆಯೇ, ʼವಿದ್ಯುನ್ಮಾನ ಮತಯಂತ್ರಗಳ ಬದಲು ಮತಪತ್ರಗಳ ಮೂಲಕವೇ ಚುನಾವಣೆ ನಡೆಸಬೇಕುʼ ಎಂದು ಆಗ್ರಹಿಸಿದ್ದಾರೆ.
ಎಸ್‌ಐಆರ್ ವೇಳೆ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಜ್ಞಾನೇಶ್ ಕುಮಾರ್ ತಲೆದಂಡಕ್ಕೆ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಯಾವುದೇ ಪಕ್ಷದ ಧ್ವಜ ಹಿಡಿದುಕೊಳ್ಳದಂತೆ, ರಾಷ್ಟ್ರಧ್ವಜವನ್ನು ಪ್ರದರ್ಶಿಸುವಂತೆ ಸೂಚಿಸಲಾಗಿತ್ತು.
ಇದೇ ವಿಚಾರವಾಗಿ ಎರಡು ದಿನಗಳ ಹಿಂದಷ್ಟೇ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಪ್ರತಿಭಟನೆ ನಡೆಸಿತ್ತು.