
ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಬಿಜೆಪಿ ಕುತಂತ್ರ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಬಿಜೆಪಿ ನಾಯಕರು ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹಾಗೂ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ನಾಯಕರು ಇಂತಹ ಬೆಳವಣಿಗೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ. ಸ್ಟಿಂಗ್ ಆಪರೇಷನ್ ನೆಪದಲ್ಲಿ ಬಿಜೆಪಿ ನಾಯಕರು ಕುತಂತ್ರ ನಡೆಸುತ್ತಿದ್ದಾರೆ ಎಂದು ದೂರಿದರು.
‘ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಕೆಟ್ಟ ಹೆಸರು ತಂದು, ಪಕ್ಷದ ನಾಯಕರ ನಡುವೆ ಸಂಘರ್ಷ ಸೃಷ್ಟಿಸಲು ತಂತ್ರ ರೂಪಿಸಲಾಗುತ್ತಿದೆ. ಇಂತಹ ಪ್ರಯತ್ನಗಳಿಂದ ನಮ್ಮ ನಾಯಕರಿಗೆ ಏನೂ ಆಗುವುದಿಲ್ಲ. ಸ್ಟಿಂಗ್ ಆಪರೇಷನ್ ಕುರಿತು ತನಿಖೆ ನಡೆಸಲು ಸರ್ಕಾರದ ಯಾವುದೇ ವಿರೋಧವಿಲ್ಲ’ ಎಂದರು.
‘ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು..
ಅಂಜನಾದ್ರಿ ಬೆಟ್ಟದ ಕಚೇರಿಗಳಿಗೆ ಬೀಗ ಹಾಕಿರುವ ಕುರಿತು ಪ್ರತಿಕ್ರಿಯಿಸಿದ ತಂಗಡಗಿ, ಅರ್ಚಕ ವಿದ್ಯಾದಾಸ್ ಬಾಬಾ ಅವರು ಹೈಕೋರ್ಟ್ ಆದೇಶದ ಪ್ರತಿಯನ್ನು ಹಿಡಿದು ಕಚೇರಿಗಳಿಗೆ ಬೀಗ ಹಾಕಿರುವ ಬಗ್ಗೆ ಮಾಹಿತಿ ಬಂದಿದೆ ಎಂದರು.
‘ಈ ಕುರಿತು ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ, ಹೈಕೋರ್ಟ್ ಆದೇಶದಲ್ಲಿ ಏನಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುವುದು. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.