ದಿನಸಿ ಅಂಗಡಿಯಲ್ಲೂ ಮದ್ಯ ಮಾರಾಟ: ವಿಜಯೇಂದ್ರ ಆರೋಪ
ಶಿಡ್ಲಘಟ್ಟ: ‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ₹45 ಸಾವಿರ ಕೋಟಿ ಆದಾಯ ಸಂಗ್ರಹಿಸುವ ಗುರಿ ನೀಡಿದೆ. ಇದರಿಂದ ಗ್ರಾಮೀಣ ಪ್ರದೇಶಗಳ ದಿನಸಿ ಹಾಗೂ ಪೆಟ್ಟಿಗೆ ಅಂಗಡಿಗಳಲ್ಲಿಯೂ ಮದ್ಯ ಸುಲಭವಾಗಿ ಸಿಗುವಂತಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ನಗರದ ಮಯೂರ ವೃತ್ತದಲ್ಲಿರುವ ಬಿಜೆಪಿ ಸೇವಾಸೌಧದಲ್ಲಿ ಶುಕ್ರವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,‘ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ ₹2 ಸಾವಿರ ನೀಡುತ್ತಿರುವುದಾಗಿ ಹೇಳಿಕೊಳ್ಳುವ ಸರ್ಕಾರ, ಮತ್ತೊಂದೆಡೆ ಅಬಕಾರಿ ಆದಾಯದ ಮೂಲಕ ಜನರಿಂದ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸುತ್ತಿದೆ’ ಎಂದು ಟೀಕಿಸಿದರು.
‘ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ರೈತರ ಸಮಸ್ಯೆ ಆಲಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಮಯವಿಲ್ಲ. ಬರ ಪರಿಸ್ಥಿತಿಯನ್ನು ಹೆಲಿಕಾಪ್ಟರ್‌ನಲ್ಲಿ ವೀಕ್ಷಿಸುವ ಮೂಲಕ ದಾಖಲೆ ಬರೆದಿದ್ದಾರೆ’ ಎಂದು ವ್ಯಂಗ್ಯವಾಡಿದರು.
‘ರೈತರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದ ಅವರು, ರಿಂಗ್ ರೋಡ್ ನಿರ್ಮಾಣದ ಹೆಸರಿನಲ್ಲಿ ರೈತರ ಜಮೀನುಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಇದರಿಂದ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶ ಸರ್ಕಾರಕ್ಕಿದೆ’ ಎಂದು ದೂರಿದರು.
‘ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು, ಯುವಕರು ಹಾಗೂ ನಿತ್ಯ ಕೂಲಿ ಕೆಲಸಕ್ಕೆ ತೆರಳುವವರಿಗೆ ಸಮರ್ಪಕ ಬಸ್ ಸೌಲಭ್ಯವಿಲ್ಲ. ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದರೂ ಸರ್ಕಾರ ಗಮನಹರಿಸುತ್ತಿಲ್ಲ’ ಎಂದು ಆರೋಪಿಸಿದರು.
‘ಅಂಗವಿಕಲರ ಪಿಂಚಣಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ. ಹೈನುಗಾರಿಕೆಗೆ ನೀಡುತ್ತಿದ್ದ ಸಹಾಯಧನವನ್ನೂ ಸ್ಥಗಿತಗೊಳಿಸಲಾಗಿದೆ’ ಎಂದು ದೂರಿದರು.
‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ರೈತರಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲಾಗಿತ್ತು. ಹೆಣ್ಣುಮಕ್ಕಳ ಕಲ್ಯಾಣಕ್ಕಾಗಿ ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್ ಸೌಲಭ್ಯ ಕಲ್ಪಿಸಲಾಗಿತ್ತು’ ಎಂದು ಸ್ಮರಿಸಿದರು.
ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ, ಮಾಜಿ ಸಂಸದ ಮುನಿಸ್ವಾಮಿ, ಪ್ರೀತಂಗೌಡ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಆನಂದ ಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ, ದೇವರಾಜ್, ರಾಮಲಿಂಗಪ್ಪ, ಗೋಪಿ, ಸುರೇಂದ್ರ ಗೌಡ ನಂದೀಶ್ ಆಂಜನೇಯ ಗೌಡ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.