CEC ವಿರುದ್ಧದ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಪತ್ರಕರ್ತೆಯರ ದೂರು
ನವದೆಹಲಿ: ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 3ರಂದು ನಡೆದ ಪ್ರತಿಭಟನೆ ಸಂದರ್ಭ ದೆಹಲಿ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೂವರು ಪತ್ರಕರ್ತೆಯರು ದೂರು ನೀಡಿದ್ದಾರೆ. ಅವುಗಳನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ನವದೆಹಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ವಿದ್ಯಾರ್ಥಿ ಸಂಘಟನೆಗಳು, ಇತರ ಸಂಘಟನೆಗಳ ಸದಸ್ಯರು ಸೇರಿದಂತೆ ಪ್ರತಿಭಟನಾಕಾರರು ಜಂತರ್ ಮಂತರ್‌ನಲ್ಲಿ ಜಮಾಯಿಸಲು ಯತ್ನಿಸಿದ್ದರು.
ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೂವರು ಪತ್ರಕರ್ತೆಯರು ದೂರು ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜಿಸಲಾಗಿದ್ದ ಸಿಬ್ಬಂದಿ ವಿರುದ್ಧವೇ ದೂರುಗಳು ಬಂದಿರುವುದರಿಂದ, ನ್ಯಾಯಸಮ್ಮತ ಮತ್ತು ಪಾರದರ್ಶಕ ತನಿಖೆ ನಡೆಸುವ ಸಲುವಾಗಿ ಜಿಲ್ಲಾ ಪೊಲೀಸರು ಪ್ರಕರಣಗಳನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರುದ್ಧ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮತ್ತೆ ಪ್ರತಿಭಟನೆಗಳು ನಡೆಯುತ್ತಿವೆ.
ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಶನಿವಾರ ನಡೆದ ಪ್ರತಿಭಟನೆ ಸಂಬಂಧ ಸುಮಾರು 200 ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಅವರಲ್ಲಿ ಎಐಎಸ್‌ಎ ರಾಷ್ಟ್ರೀಯ ಅಧ್ಯಕ್ಷ ನೇಹಾ ಬೋರಾ, ಯೋಗೇಂದ್ರ ಯಾದವ್, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಪ್ರಮುಖರು.
ಕಾನೂನುಬಾಹಿರವಾಗಿ ಗುಂಪುಗೂಡಿದ್ದು, ಸರ್ಕಾರದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದು ಸೇರಿದಂತೆ ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.