
ಮಂಗಳೂರು: ಜಿಲ್ಲೆಯ ಹೆದ್ದಾರಿಗಳಲ್ಲಿ 42 ಅಪಘಾತ ವಲಯ ಗುರುತು
ಮಂಗಳೂರು: ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ ಸಂಚಾರ ವ್ಯವಸ್ಥೆ ನಿರ್ವಹಣೆಗೆ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧ ವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ರಸ್ತೆ, ಜಿಲ್ಲಾ ಮುಖ್ಯ ರಸ್ತೆ ಸೇರಿದಂತೆ ಹಲವೆಡೆ ಪದೇ ಪದೇ ಅಪಘಾತ ಹಾಗೂ ಜೀವಹಾನಿ ಆಗುವ ಘಟನೆಗಳು ನಡೆಯುತ್ತಿವೆ. ಇಂತಹ ಸ್ಥಳಗಳಲ್ಲಿ ವೇಗ ನಿಯಂತ್ರಕ, ಟ್ರಾಫಿಕ್ ಸಿಗ್ನಲ್, ಸೂಚನಾ ಫಲಕ ಸೇರಿದಂತೆ ವಿವಿಧ ಸಂಚಾರ ಸುರಕ್ಷತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಈ ಸ್ಥಳಗಳಲ್ಲಿ ತಾತ್ಕಾಲಿಕ ಕ್ರಮ ಕೈಗೊಳ್ಳುವುದಲ್ಲದೆ ಭವಿಷ್ಯದ ದೃಷ್ಟಿಯಿಂದ ಶಾಶ್ವತ ಸುರಕ್ಷತಾ ಕ್ರಮಗಳನ್ನೂ ಅನುಷ್ಠಾನಗೊಳಿಸಬೇಕು ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ 42 ಪ್ರಮುಖ ಅಪಘಾತ ಸ್ಥಳ ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
33,703 ಪ್ರಕರಣ ದಾಖಲು: 2025-26ರಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಿಧ ಪ್ರಕರಣ ದಾಖಲಿಸಲಾಗಿವೆ. ಈ ಪೈಕಿ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಬಗ್ಗೆ 2,604 ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಟಿಂಟೆಡ್ ಗ್ಲಾಸ್ ಅಳವಡಿಸಿದ 33,703 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, 2025 ರಲ್ಲಿ ₹73.89 ಲಕ್ಷ ಹಾಗೂ 2026 ರಲ್ಲಿ ₹75.88 ಲಕ್ಷ ದಂಡ ವಸೂಲು ಮಾಡಲಾಗಿದೆ. ಕರ್ಕಶ ಹಾರ್ನ್ ಅಳವಡಿಸಿದ ವಾಹನಗಳ ವಿರುದ್ಧ 2,805 ಪ್ರಕರಣ ದಾಖಲಿಸಿ 2026ರಲ್ಲಿ ₹8.38 ಲಕ್ಷ ಹಾಗೂ 2025 ರಲ್ಲಿ ₹7.44 ಲಕ್ಷ ದಂಡ ವಸೂಲು ಮಾಡಲಾಗಿದೆ.
ಶಾಲಾ ವಾಹನದಲ್ಲಿ ಮಿತಿಮೀರಿ ಮಕ್ಕಳನ್ನು ಸಾಗಿಸಿದ 974 ಪ್ರಕರಣ ದಾಖಲಿಸಲಾಗಿದೆ. ಮೀನು ಸಾಗಾಟ ವಾಹನಗಳಲ್ಲಿ ತ್ಯಾಜ್ಯ ನೀರನ್ನು ರಸ್ತೆಗೆ ಚೆಲ್ಲುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 2026 ರಲ್ಲಿ 535 ಪ್ರಕರಣ ದಾಖಲಿಸಿ, ₹2.65 ಲಕ್ಷ ದಂಡ ವಸೂಲು ಮಾಡಲಾಗಿದೆ. ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯವರು ಈ ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದು ಎಸ್.ಪಿ ತಿಳಿಸಿದರು.
ರಸ್ತೆ ಅಪಘಾತ ನಡೆಸಿ ಜೀವಹಾನಿಗೆ ಕಾರಣವಾದ 279 ಪ್ರಕರಣಗಳಲ್ಲಿ 538 ಚಾಲನಾ ಪರವಾನಗಿ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಡಿಸಿಪಿ ರವಿಶಂಕರ್, ಎ.ಸಿ.ಪಿ ನಜ್ಮಾ ಫಾರೂಕಿ, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ ಬಿ ಶಿರೋಳ್ಕರ್ ಮತ್ತಿತ್ತರರು ಉಪಸ್ಥಿತರಿದ್ದರು.