
ಹಿರಿಯೂರು| ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರಜಾಸೇವಾ ಅಭಿಯಾನ: ಡಿಸಿ
ಹಿರಿಯೂರು: ನಗರದ ನೆಹರು ಮೈದಾನದಲ್ಲಿ ನ. 21ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪ್ರಜಾಸೇವಾ ಅಭಿಯಾನ ನಡೆಯಲಿದ್ದು, ಸಿದ್ಧತೆಗಳ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ಎಸ್. ರಮ್ಯಾ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾಸೇವಾ ಅಭಿಯಾನದ ಪ್ರಯುಕ್ತ ನಗರಸಭೆ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾಹಿತಿ ಪಡೆದರು.
ಕಾರ್ಯಕ್ರಮದಲ್ಲಿ ಪ್ರತಿ ಮಳಿಗೆಗಳಿಗೂ ಮುಖ್ಯಮಂತ್ರಿ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುವುದರಿಂದ, ಎಲ್ಲಾ ಇಲಾಖೆಗಳು ಇತ್ತೀಚಿನ ಯೋಜನೆಗಳು ಮತ್ತು ಸಾಧನೆಗಳನ್ನು ಅರ್ಥಪೂರ್ಣವಾಗಿ ಪ್ರದರ್ಶಿಸಬೇಕು. ಸಾರ್ವಜನಿಕರಿಗೆ ಉಪಯುಕ್ತವಾಗುವ ಮಾಹಿತಿ ಮತ್ತು ಪ್ರಾತ್ಯಕ್ಷಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸ್ವ–ಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನಕ್ಕೆ ಮಳಿಗೆಗಳ ವ್ಯವಸ್ಥೆ ಮಾಡಬೇಕು. ವಿಶೇಷವಾಗಿ ಸಾವಯವ ಕೃಷಿ, ಜೈವಿಕ ಗೊಬ್ಬರ, ನೂತನ ಕೃಷಿ ತಂತ್ರಜ್ಞಾನ ಹಾಗೂ ಪೌಷ್ಟಿಕಾಂಶ ಅಭಿಯಾನದ ಕುರಿತು ವಿಶೇಷ ಮಳಿಗೆಗಳನ್ನು ತೆರೆಯುವಂತೆ ಸೂಚಿಸಿದರು.
ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆ, ರೇಷ್ಮೆ ಇಲಾಖೆಯ ನೂತನ ಕಾರ್ಯಕ್ರಮಗಳು ಹಾಗೂ ಬೆಳೆ ವಿಮೆ ಪರಿಹಾರ ವಿತರಣೆಯ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಬೆಳೆ ಕಟಾವು ಪ್ರಯೋಗಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಅರ್ಹ ರೈತರಿಗೆ ಶೀಘ್ರವೇ ವಿಮಾ ಪರಿಹಾರ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಭೆಯ ನಂತರ ವಿವಿಧ ಇಲಾಖೆಗಳ ಮುಖ್ಯಸ್ಥರೊಂದಿಗೆ ಕಾರ್ಯಕ್ರಮ ನಡೆಯುವ ಮೈದಾನಕ್ಕೆ ಭೇಟಿ ನೀಡಿ, ಮಳಿಗೆಗಳ ನಿರ್ಮಾಣಕ್ಕೆ ಇರುವ ಸ್ಥಳಾವಕಾಶ ಪರಿಶೀಲಿಸಿದರು. ಸಾರ್ವಜನಿಕರಿಂದ ಈಗಾಗಲೇ ಸ್ವೀಕರಿಸಲಾದ ಹಾಗೂ ಕಾರ್ಯಕ್ರಮದ ದಿನದಂದು ಸ್ವೀಕರಿಸುವ ಅರ್ಜಿಗಳನ್ನು ವ್ಯವಸ್ಥಿತವಾಗಿ ದಾಖಲಿಸಿ, ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್. ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಉಪಸ್ಥಿತರಿದ್ದರು.