
ಗೌರಿಬಿದನೂರು | ಟೋಲ್ ಸಂಗ್ರಹಕ್ಕೆ ಆಸಕ್ತಿ; ದುರಸ್ತಿಗೆ ನಿರಾಸಕ್ತಿ
ಗೌರಿಬಿದನೂರು: ಬೆಂಗಳೂರಿನಿಂದ ತಾಲ್ಲೂಕಿನ ಮೂಲಕ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ.
ನಗರದ ನ್ಯಾಷನಲ್ ಕಾಲೇಜು, ಅಯ್ಯಪ್ಪಸ್ವಾಮಿ ದೇವಸ್ಥಾನ, ನಾಗಪ್ಪ ಬ್ಲಾಕ್, ಮಾದನಹಳ್ಳಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮುಂಭಾಗ ಸೇರಿದಂತೆ ವಿವಿಧೆಡೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದೊಡ್ಡ ಗುಂಡಿಗಳು ವಾಹನ ಸವಾರರಿಗೆ ಅಪಾಯ ತಂದೊಡ್ಡಿವೆ. ಗುಂಡಿಗಳನ್ನು ತಪ್ಪಿಸುವ ಸಮಯದಲ್ಲಿ ವಾಹನ ಸವಾರರಿಗೆ ಅಪಘಾತಗಳ ಆತಂಕವೂ ಹೆಚ್ಚಾಗಿದೆ.
ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ನಿಯಮಿತವಾಗಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿದೆ. ಆದರೆ ರಸ್ತೆ ನಿರ್ವಹಣೆ ಮತ್ತು ದುರಸ್ತಿಗೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ. ಟೋಲ್ ಸಂಗ್ರಹಕ್ಕೆ ತೋರುವ ಆಸಕ್ತಿಯನ್ನು ರಸ್ತೆ ನಿರ್ವಹಣೆಗೂ ತೋರಿಸಬೇಕು ಎಂಬುದು ಜನರ ಒತ್ತಾಯವಾಗಿದೆ.
ನಗರವೂ ವೇಗವಾಗಿ ಬೆಳೆಯುತ್ತಿದ್ದು, ದಿನದಿಂದ ದಿನಕ್ಕೆ ವಾಹನಗಳ ಸಂಚಾರ, ದಟ್ಟಣೆ ಹೆಚ್ಚಾಗುತ್ತಿದೆ. ಈ ರಸ್ತೆಯಲ್ಲಿ ಸಂಚರಿಸುವಾಗ ಗುಂಡಿಗಳನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಮುಂದಾಗಿಲ್ಲ ಎಂದು ವಾಹನ ಸವಾರ ಮಹೇಶ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮೂಲಕ ವಾಣಿಜ್ಯ ಚಟುವಟಿಕೆ, ಕೈಗಾರಿಕಾ ಪ್ರದೇಶ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ನಿತ್ಯ ಸಾವಿರಾರು ವಾಹನ ಸಂಚರಿಸುತ್ತವೆ. ವಾಹನಗಳ ಸಂಚಾರಕ್ಕೆ ಅನುಕೂಲವಾಗಲೆಂದು ಟೋಲ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಆದರೆ ರಸ್ತೆಯಲ್ಲಿರುವ ಗುಂಡಿಗಳನ್ನು ದುರಸ್ತಿಪಡಿಸದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ವಾಹನ ಸವಾರರು ತೊಂದರೆ ಅನುಭವಿಸುವುದರ ಜೊತೆಗೆ ಅಪಘಾತಗಳಿಗೂ ತುತ್ತಾಗುತ್ತಿದ್ದಾರೆ ಎಂದು ಮಾದನಹಳ್ಳಿ ಕೃಷ್ಣಪ್ಪ ದೂರಿದರು.
ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.