
ಜನರ ಜೀವನ ದುಸ್ತರಗೊಳಿಸಿದ ಕಾಂಗ್ರೆಸ್ ಸರ್ಕಾರ: ಸುರೇಶ ಅವಟೆ
ಅಫಜಲಪುರ: ‘ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೊರೆಸುತ್ತಿದೆ. ಹೀಗಾಗಿ ಬಡವರು, ಮಧ್ಯಮ ವರ್ಗದವರು ಜೀವನ ಸಾಗಿಸುವುದು ಕಷ್ಟಕರವಾಗಿದೆ’ ಎಂದು ವಕೀಲರ ಸಂಘದ ಸದಸ್ಯ ಸುರೇಶ ಅವಟೆ ಪ್ರಕಟಣೆಯಲ್ಲಿ ಹೇಳಿದ್ದಾರೆ.
‘ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್, ಇದೀಗ ಅಗತ್ಯ ವಸ್ತುಗಳು ಹಾಗೂ ಸಾರಿಗೆ ಸೇವೆ ದರ ಹೆಚ್ಚಿಸಿ ಜನಸಾಮಾನ್ಯರ ಬದುಕು ದುಸ್ತರಗೊಳಿಸುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಭರವಸೆ ನೀಡುತ್ತಿರುವ ಸರ್ಕಾರ, ಮತ್ತೊಂದೆಡೆ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ’ ಎಂದು ದೂರಿದ್ದಾರೆ.